ಗ್ರಾ.ಪಂ.ಮಟ್ಟದಲ್ಲಿ ದೌರ್ಜನ್ಯ ನಿಯಂತ್ರಣ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ
Create awareness about violence control at the village council level: Deputy Commissioner
ಹಾವೇರಿ 20: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ಶಿಕ್ಷೆ ಕುರಿತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಎಲ್ಲ ಸಮುದಾಯಗಳ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೌರ್ಜನ್ಯ ಪ್ರಕರಣಗಳ ಕುರಿತು ದಾವಣಗೆರೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್.ಪಿ.ಅವರ ಅಧ್ಯಕ್ಷತೆಯಲ್ಲಿ ಹಾವೇರಿಯಲ್ಲಿ ದಲಿತ ಮುಖಂಡ ಸಭೆ ಆಯೋಜಿಸಿ, ದೌರ್ಜನ್ಯ ಪ್ರಕರಣ ತಡೆ ಕುರಿತು ಅರಿವು ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕುವಾರು ಹಾಗೂ ಪೊಲೀಸ್ ಠಾಣಾವಾರು ದೌರ್ಜನ್ಯ ಪ್ರಕರಣಗಳ ಮಾಹಿತಿ ನೀಡಿದರೆ, ಅಂತಹ ಪ್ರದೇಶಗಳಲ್ಲಿ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಲು ಸಹಾಯವಾಗುತ್ತದೆ. ದೌರ್ಜನ್ಯ ಪ್ರಕರಣದ ನಿಖರ ಮಾಹಿತಿ ತಿಳಿದುಕೊಳ್ಳಬೇಕು. ಅಪರಾಧಿಗೆ ಶಿಕ್ಷೆಯಾಗಬೇಕು, ನಿರಪರಾಧಿಗೆ ಶಿಕ್ಷೆಯಾಗಬಾರದು. ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಗೆ ಮೀಸಲಾದ ಅನುದಾನ ಆಯಾ ಸಾಲಿನಲ್ಲೇ ವೆಚ್ಚವಾಗಬೇಕು ಹಾಗೂ ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ತಲುಪಬೇಕು. ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ವೇತನ ಪಾವತಿಯಾಗಬೇಕು, ತಾಂಡಾಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅವರ ಬಗ್ಗೆ ಅರಿವು ಕಾರ್ಯಕ್ರಮ ಆಯೋಜಿಸಬೇಕು, ಭರಡಿ ಗ್ರಾಮದಲ್ಲಿ ಸ್ಮಶಾನದ ಜಾಗದ ಸಮಸ್ಯೆ, ಮರಡೂರ ಗ್ರಾಮದಲ್ಲಿ ಸ್ಮಶಾನಕ್ಕೆ ದಾರಿ ಇಲ್ಲ, ಸವಣೂರ ಗ್ರಾಮದಲ್ಲಿ 2014ರಲ್ಲಿ 20 ಎಸ್ಸಿ ಕುಟುಂಬಗಳಿಗೆ ಪಟ್ಟಾ ನೀಡಲಾಗಿದೆ, ಆದರೆ ಆರ್.ಟಿ.ಸಿ. ಇಂಡೀಕರಣ ಮಾಡಿಲ್ಲ, ಹರವಿ ಗ್ರಾಮದಲ್ಲಿ ನೀರು ಸಂಗ್ರಹ ಟ್ಯಾಂಕ್ ಶಿಥಿಲಗೊಂಡಿದ್ದು, ಆ ಟ್ಯಾಂಕ್ ನೀರು ಸೋರಿಕೆಯಾಗಿ ನಾಲ್ಕು ಮನೆಗಳಿಗೆ ಜೌಗು ಹಿಡಿದಿದೆ, ಹಿರೇಮಳ್ಳಿಹಳ್ಳಿ ಎಸ್.ಸಿ. ಕಾಲೋನಿಗೆ ಹೊಸ ಅಂಗನವಾಡಿ ಮಂಜೂರು ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತೆ ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರಾದ ಶಿವರಾಜ ಹರಿಜನ, ಸಂಜಯಗಾಂಧಿ, ಬಸವರಾಜ ಹೆಡಿಗ್ಗೊಂಡ, ಎನ್.ಎಂ. ಗಾಳೆಮ್ಮನವರ, ಜಗದೀಶ ಹರಿಜನ, ರಮೇಶ ಕೊರವರ, ಅಜ್ಜಪ್ಪ ಗೋಣೆಮ್ಮನವರ, ಮಲ್ಲೇಶ ದೇವಗಿರಿ ಅವರುಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಸುತ್ತಿರುವ ಪೌರ ಕಾರ್ಮಿಕರ ವೇತನ ಪಾವತಿಗೆ ಮೊದಲ ಆದ್ಯತೆ ನೀಡಬೇಕು. ಜೊತೆಗೆ ಕರ ವಸೂಲಿಗೆ ಹೆಚ್ಚಿನ ಗಮನಹರಿಸಬೇಕು. ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಬೇಕು. ಸ್ಮಶಾನಕ್ಕೆ ಹೋಗಲು ದಾರಿ ಸಮಸ್ಯೆ ಇರುವಲ್ಲಿ ಸ್ಮಶಾನದಲ್ಲಿ ಅಧಿಕ ಜಾಗವಿದ್ದರೆ, ದಾರಿಗೆ ನೀಡುವ ಜಮೀನಿನಷ್ಟು ಜಾಗವನ್ನು ಸ್ಮಶಾನದಲ್ಲಿ ನೀಡುವುದಾಗಿ ಮನವೊಲಿಸಿ ದಾರಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು, ಸ್ಮಶಾನದ ಸಮಸ್ಯೆ ಇರುವಲ್ಲಿ ಜಾಗ ಗುರುತಿಸಬೇಕು. ಈ ಸಭೆಯ ಗಮನಕ್ಕೆ ತರಲಾದ ಎಲ್ಲ ಸಮಸ್ಯೆಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಆದ್ಯತೆ ಮೇರಗೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಅವರು ಮಾತನಾಡಿ, ಜನವರಿ-2025 ರಿಂದ ಈವರೆಗೆ 55 ಪ್ರಕರಣಗಳು ದಾಖಲಾಗಿದ್ದು, 53 ಪ್ರಕರಣಗಳಲ್ಲಿ ಪರಿಹಾರ ಮಂಜೂರ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪುನಿತ್, ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ಜಿಲ್ಲಾ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಸರೋಜಾ ಕೂಡಲಮಠ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 