ಮಕ್ಕಳಲ್ಲಿ ಕಾನೂನು ಅರಿವು, ರಸ್ತೆ ಸುರಕ್ಷತೆ ಕುರಿತು ಜಾಗೃತಿ

ಮಕ್ಕಳಲ್ಲಿ ಕಾನೂನು ಅರಿವು, ರಸ್ತೆ ಸುರಕ್ಷತೆ ಕುರಿತು ಜಾಗೃತಿ  Creating awareness among children about legal knowledge and road safety

ಆಲಮೇಲ 06 :  ಆಲಮೇಲ ಪೊಲೀಸ್ ಠಾಣೆಯ ಪಿಎಸ್‌ಐ ಅರವಿಂದ ಅಂಗಡಿ ಅವರು ಮಕ್ಕಳಲ್ಲಿ ಬಾಲ್ಯದಿಂದಲೇ ಕಾನೂನು ಅರಿವು, ರಸ್ತೆ ಸುರಕ್ಷತೆ ಹಾಗೂ ವೈಯಕ್ತಿಕ ಭದ್ರತೆ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯ ಎಂದು ಹೇಳಿದರು.  

ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು ಮತ್ತು ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆ ನಿಯಮಗಳು, ಮಕ್ಕಳ ಹಕ್ಕುಗಳು, ಗುಡ್ ಟಚ್ ಮತ್ತು ಬ್ಯಾಡ್ ಟಚ್ ಸೈಬರ್ ಅಪರಾಧಗಳು ಹಾಗೂ ಮೊಬೈಲ್ ಬಳಕೆಯ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.  

ಬಾಲಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹ ಕಾನೂನುಬಾಹಿರವಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಶಾಲಾ ಮಕ್ಕಳ ಸುರಕ್ಷತೆಗಾಗಿ ಶಾಲಾ ಆವರಣ ಮತ್ತು ಸುತ್ತಮುತ್ತ ಪೊಲೀಸ್ ಗಸ್ತು ವ್ಯವಸ್ಥೆ ಮಾಡಲಾಗಿದೆ ಎಂದರು.  ಕಾರ್ಯಕ್ರಮದಲ್ಲಿ ಪೂಜ್ಯ ಬಸವಲಿಂಗ ಶರಣರು, ಸಂಸ್ಥೆಯ ಅಧ್ಯಕ್ಷ ಎಸ್‌.ಐ. ಜೋಗೂರ ಹಾಗೂ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.