ಬೆಂಗಳೂರು, ಏ.9,ಅಕಾಲಿಕ ಮಳೆಯಿಂದ ರೈತರ ಬೆಳೆ ನಾಶವಾಗಿದ್ದು, ಇಂತಹ ರೈತರಿಗೆ ಪರಿಹಾರ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಕಳೆದ ಮೂರು ದಿನಗಳಿಂದ ಗಾಳಿ ಮತ್ತು ಆಲಿಕಲ್ಲು ಸಹಿತ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆಯಿಂದಾಗಿ ಕೊಪ್ಪಳ, ಬಳ್ಳಾರಿ, ರಾಯಚೂರು, ಮೈಸೂರು, ಬೆಳಗಾವಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭತ್ತ, ಬಾಳೆ, ಕಬ್ಬು ಮತ್ತಿತರ ಬೆಳೆಗಳು ಹಾನಿಗೊಳಗಾಗಿವೆ. ಹವಾಮಾನ ಇಲಾಖೆ ಪ್ರಕಾರ ಇನ್ನೂ 3-4 ದಿನಗಳು ಮಳೆಯಾಗುವ ಸಾಧ್ಯತೆ ಇದೆ. ಕಳೆದ ಬಾರಿಯ ಪ್ರವಾಹ ಮತ್ತು ಈಗಿನ ಕೊರೋನಾ ಪರಿಣಾಮವಾಗಿ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಇದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಆದ್ದರಿಂದ ಎಲ್ಲೆಲ್ಲಿ ಬೆಳೆ ಹಾನಿಯಾಗಿದೆ ಎಂಬುದರ ಕುರಿತು ಕೂಡಲೇ ಸಮೀಕ್ಷೆ ನಡೆಸಿ ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ