ಚೆನ್ನೈ 03: ಫೆಂಜಲ್ ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ವಿನಾಶವನ್ನು ಉಂಟುಮಾಡಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ 2 ಸಾವಿರ ಕೋಟಿ ತುರ್ತು ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.
ಮಳೆಯಿಂದಾಗಿ ಹಾನಿಗೊಳಗಾಗಿರುವ ಮೂಲಸೌಕರ್ಯ ಮತ್ತು ಜೀವನೋಪಾಯವನ್ನು ತಾತ್ಕಾಲಿಕವಾಗಿ ಮರುಸ್ಥಾಪಿಸಲು ಈ ಮೊತ್ತವು ರಾಜ್ಯ ಸರ್ಕಾರಕ್ಕೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.
‘ಚಂಡಮಾರುತದ ಪರಿಣಾಮ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಮಳೆಯಿಂದಾಗಿ ರಸ್ತೆಗಳು, ಮನೆಗಳು ಜಲಾವೃತಗೊಂಡಿದ್ದು, ಬೆಳೆಗಳಿಗೆ ತೀವ್ರ ಹಾನಿ ಉಂಟಾಗಿದೆ. ಇದರಿಂದಾಗಿ ರಾಜ್ಯದ 69 ಲಕ್ಷ ಕುಟುಂಬಗಳ 1.5 ಕೋಟಿ ಜನರು ತೊಂದರೆಗೀಡಾಗಿದ್ದಾರೆ. ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಒದಗಿಸಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಸ್ಟಾಲಿನ್ ಪತ್ರದಲ್ಲಿ ತಿಳಿಸಿದ್ದಾರೆ.
ಹಾನಿಯ ಪ್ರಾಥಮಿಕ ಅಂದಾಜಿನ ಪ್ರಕಾರ, ತಾತ್ಕಾಲಿಕ ಮರುಸ್ಥಾಪನೆ ಪ್ರಯತ್ನಗಳಿಗೆ 2,475 ಕೋಟಿ ರೂಪಾಯಿ ಅಗತ್ಯವಿದೆ ಎಂದು ಸಿಎಂ, ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಹಾನಿಯ ಸಮಗ್ರ ಮೌಲ್ಯಮಾಪನವನ್ನು ಕೈಗೊಳ್ಳಲು ಆದಷ್ಟು ಬೇಗ ಕೇಂದ್ರ ತಂಡವನ್ನು ನಿಯೋಜಿಸುವಂತೆ ಅವರು ಮೋದಿಯವರಿಗೆ ಮನವಿ ಮಾಡಿದ್ದಾರೆ.
ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಸ್ಟಾಲಿನ್‌ಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡು , ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ರೀತಿಯ ನೆರವು ನೀಡುವುದಾಗಿ ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.