ಗರ್ಭಿಣಿಯರ ನೋಂದಣಿ ವಿಳಂಬವಾಗದಂತೆ ಎಚ್ಚರಿಕೆವಹಿಸಲು ಡಿಸಿ ಸೂಚನೆ

ಗರ್ಭಿಣಿಯರ ನೋಂದಣಿ ವಿಳಂಬವಾಗದಂತೆ ಎಚ್ಚರಿಕೆವಹಿಸಲು ಡಿಸಿ ಸೂಚನೆ DC issues warning to be careful not to delay registration of pregnant women

ಹಾವೇರಿ 20 : ಜಿಲ್ಲೆಯಲ್ಲಿ ಗರ್ಭಿಣಿಯರ ನೋಂದಣಿ ವಿಳಂಬವಾಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಅವಧಿಗೆ ಮುನ್ನ ಹೆರಿಗೆಯಾಗುತ್ತಿರುವ  ಬಗ್ಗೆ ಕಾರಣಗಳನ್ನು ತಿಳಿದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಖಡಕ್   ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಆರೋಗ್ಯ ಅಭಿಯಾನದ ಪ್ರಗತಿ ಪರೀಶೀಲನಾ ಸಭೆ ಹಾಗೂ ಜಿಲ್ಲಾ ಕಣ್ಗವಾಲು ಸಮಿತಿ ಸಭೆಯಲ್ಲಿ ಗರ್ಭಿಣಿಯರ ನೋಂದಣಿ, ಅವಧಿಗೆ ಮುನ್ನ ಹೆರಿಗೆ ಪ್ರಮಾಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು,  ಗ್ರಾಮೀಣ ಪ್ರದೇಶದಲ್ಲಿ ಗರ್ಭಿಣಿಯರ ನೋಂದಣಿಗೆ ಆದ್ಯತೆ ನೀಡುವಂತೆ ಹಾಗೂ ಆರೋಗ್ಯ ಇಲಾಖೆ ಸೌಲಭ್ಯಗಳ ಕುರಿತು ಮಾಹಿತಿ ನೀಡುವಂತೆ ಆಶಾ ಕಾರ್ಯಕರ್ತರಿಗೆ ಸೂಚನೆ ನೀಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. 

ಗರ್ಭಿಣಿಯರು, ಬಾಣಂತಿಯರು ಹಾಗೂ ಶಿಶುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಸಹಿಬೇಕು. ಅವರಿಗೆ ಕಾಲಕಾಲಕ್ಕೆ ಅಗತ್ಯ ಚುಚ್ಚುಮದ್ದು ಹಾಗೂ ಮಾತ್ರೆಗಳನ್ನು ನೀಡುವ ಜೊತೆಗೆ ಆರೋಗ್ಯ ಶಿಕ್ಷಣ ನೀಡಬೇಕು. ತುರ್ತು ಚಿಕಿತ್ಸೆಗೆ ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಬೇರೆ ಆಸ್ಪತ್ರೆಗೆ ಕಳುಹಿಸುವ ಮೊದಲು ಅಗತ್ಯ ಪ್ರಥಮ ಚಿಕಿತ್ಸೆ ನೀಡಬೇಕು ಎಂದು ಎಚ್ಚರಿಕೆ ನೀಡಿದರು.  

ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ  ಹಾಗೂ ತಾಲೂಕಾ ಆಸ್ಪತ್ರೆಗಳಲ್ಲಿ ಅಗತ್ಯ ಚುಚ್ಚುಮದ್ದು, ಓಷಧಿಗಳು ಹಾಗೂ ಮಾತ್ರೆಗಳು, ನಾಯಿಕಡಿತ ಹಾಗೂ ಹಾವು ಕಡಿತಕ್ಕೆ ನೀಡುವ ಚುಚ್ಚುಮದ್ದುಗಳ ದಾಸ್ತಾನು ಮಾಡಿಕೊಳ್ಳಬೇಕು. ಬಡವರಿಗೆ ಅಗತ್ಯ ಆರೋಗ್ಯ ಸೇವೆ ಸಿಗುವಂತಾಗಬೇಕು ಎಂದರು. 

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ, ಡಾ.ನೀಲೇಶ, ಡಾ.ಜಗದೀಶ ಪಾಟೀಲ, ಡಾ.ಚನ್ನವೀರಯ್ಯ ವಿರಕ್ತಮಠ, ಹಾವೇರಿ ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಸೇರಿದಂತೆ ಎಲ್ಲ ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.