ಹೊಸದಿಲ್ಲಿ: ಹನ್ನೆರಡು ವರ್ಷಕ್ಕಿಂತಲೂ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಲು ಅವಕಾಶ ನೀಡುವ ವಿಧೇಯಕ ಈ ಬಾರಿಯ ಸಂಸತ್ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತ ತೀರ್ಮಾನಕ್ಕೆ ಅನುಮೋದನೆ ದೊರೆತಿದೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಪ್ರಸ್ತಾವಿತ ‘ಕ್ರಿಮಿನಲ್ ಕಾನೂನು (ತಿದ್ದುಪಡಿ) ವಿಧೇಯಕ-2018’ಕ್ಕೆ ಸಂಸತ್ ಅನುಮೋದನೆ ದೊರೆತ ಬಳಿಕ, ಕಳೆದ ಏಪ್ರಿಲ್ 21ರಂದು ಕಠುವಾ ಅತ್ಯಾಚಾರದ ಬಳಿಕ ಸರಕಾರ ಈ ಸಂಬಂಧ ಹೊರಡಿಸಿದ್ದ ಸುಗ್ರೀವಾಜ್ಞೆಯ ಸ್ಥಾನವನ್ನು ಅದು ತುಂಬಲಿದೆ.
ಗೃಹ ಸಚಿವಾಲಯ ಸಿದ್ಧಪಡಿಸಿದ ಕರಡು ವಿಧೇಯಕಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕಠಿಣ ಶಿಕ್ಷೆ: ಹೊಸ ವಿಧೇಯಕದ ಪ್ರಕಾರ, ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ವಯಸ್ಸು 16 ವರ್ಷಕ್ಕಿಂತಲೂ ಕಡಿಮೆ ಇದ್ದರೆ, ಅಂತಹ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣವನ್ನು 10ರಿಂದ 20 ವರ್ಷಕ್ಕೆ ಹೆಚ್ಚಿಸಲಾಗಿದೆ. ಸಂಪೂರ್ಣ ಜೀವಾವಧಿ ಶಿಕ್ಷೆಯನ್ನೂ ವಿಧಿಸಲು ಅವಕಾಶವಿದೆ.
ಒಂದು ವೇಳೆ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದರೆ, ಅಂತಹ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಯಾಗಲಿದೆ.
12 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಕನಿಷ್ಠ 20 ವರ್ಷ ಜೈಲು ಶಿಕ್ಷೆ ಮತ್ತು ಗರಿಷ್ಠ ಶಿಕ್ಷೆಯಾಗಿ ಮರಣ ದಂಡನೆ ವಿಧಿಸಲು ಅವಕಾಶವಿದೆ.