ಪತ್ರಕರ್ತರ ಕುಟುಂಬಕ್ಕೆ ಜೀವ ಬೆದರಿಕೆ: ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
Death threat to journalist's family: Demand for strict legal action
ಲೋಕದರ್ಶನ ವರದಿ
ವಿಜಯಪುರ, ಆಗಸ್ಟ್ 26: ಪತ್ರಕರ್ತರ ಕುಟುಂಬಕ್ಕೆ ಜೀವ ಬೆದರಿಕೆ ಹಾಕುವಂತಹ ಘಟನೆಗಳನ್ನು ಗಂಭೀರ ಅಪರಾಧವೆಂದು ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪತ್ರಕರ್ತರ ರಕ್ಷಣೆಗೆ ವಿಶೇಷ ಕಾನೂನು ರೂಪಿಸಬೇಕು ಎಂದು ಬೆಂಗಳೂರಿನ ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ವೇದಿಕೆಯ ಸಂಚಾಲಕ ದಾನೇಶ್ ಅವಟಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಪತ್ರಕರ್ತರು ನಿರ್ಭೀತಿಯಿಂದ ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಭ್ರಷ್ಟಾಚಾರ, ಅಕ್ರಮ ದಂಧೆ, ಕಾಳಸಂತೆ, ಮಾಫಿಯಾ ಹಾಗೂ ಸಮಾಜವಿರೋಧಿ ಚಟುವಟಿಕೆಗಳನ್ನು ಬೆಳಕಿಗೆ ತರುವಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.
ವಿಜಯಪುರದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಂಧೆ ಕುರಿತು ವಿಶೇಷ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಪತ್ರಕರ್ತ ಪರಶುರಾಮ ಶಿವಶರಣ ಅವರ ಮನೆಗೆ ತೆರಳಿ ಕೆಲವರು ಗೂಂಡಾ ವರ್ತನೆ ತೋರಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿರುವುದಲ್ಲದೆ, ಪತ್ರಕರ್ತ ಹಾಗೂ ಅವರ ಕುಟುಂಬದ ಸದಸ್ಯರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಅತ್ಯಂತ ಗಂಭೀರ ಮತ್ತು ದುರದೃಷ್ಟಕರವಾಗಿದೆ ಎಂದು ಅವರು ತಿಳಿಸಿದ್ದಾರೆ.
ಪತ್ರಕರ್ತರ ಕರ್ತವ್ಯಕ್ಕೆ ಬೆದರಿಕೆ ಹಾಕುವುದು ಕೇವಲ ಒಬ್ಬ ಪತ್ರಕರ್ತನ ಮೇಲಿನ ದಾಳಿಯಲ್ಲ. ಅದು ಪತ್ರಿಕಾ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಪತ್ರಿಕೋದ್ಯಮದ ಮೇಲಿನ ದಾಳಿಯಾಗಿದೆ. ಇಂತಹ ಘಟನೆಗಳು ಮರುಕಳಿಸಿದರೆ ಸಮಾಜದಲ್ಲಿನ ಅಕ್ರಮ ಚಟುವಟಿಕೆಗಳನ್ನು ಬೆಳಕಿಗೆ ತರಲು ಪತ್ರಕರ್ತರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ದಾನೇಶ್ ಅವಟಿ ಎಚ್ಚರಿಸಿದ್ದಾರೆ.
ಪತ್ರಕರ್ತರ ವೃತ್ತಿಪರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು, ಹಲ್ಲೆ ನಡೆಸುವುದು ಅಥವಾ ಅವರ ಕುಟುಂಬದ ಸದಸ್ಯರಿಗೆ ಧಮಕಿ ನೀಡುವುದನ್ನು ಗಂಭೀರ ಅಪರಾಧವೆಂದು ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಹಾಗೂ ತ್ವರಿತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪತ್ರಕರ್ತರ ಮೇಲಿನ ದಾಳಿ ಮತ್ತು ಬೆದರಿಕೆ ಪ್ರಕರಣಗಳ ತನಿಖೆಯನ್ನು ವಿಳಂಬವಿಲ್ಲದೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ವ್ಯವಸ್ಥೆ ಜಾರಿಗೆ ತರಬೇಕು. ಸಮಾಜದ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳನ್ನು ನಿರ್ಭೀತಿಯಿಂದ ವರದಿ ಮಾಡುವ ಪತ್ರಕರ್ತರಿಗೆ ವಿಶೇಷ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರತ್ಯೇಕ ಹಾಗೂ ಪರಿಣಾಮಕಾರಿ ಕಾನೂನು ರೂಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಪತ್ರಕರ್ತರ ಕುಟುಂಬಗಳ ಸುರಕ್ಷತೆಯನ್ನೂ ಪರಿಗಣಿಸಿ, ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಪತ್ರಿಕಾ ಸ್ವಾತಂತ್ರ್ಯವನ್ನು ರಕ್ಷಿಸಬೇಕು ಎಂದು ದಾನೇಶ್ ಅವಟಿ ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 