ಮುದ್ದೇಬಿಹಾಳ, ತಾಳಿಕೋಟೆ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ: ಎ.ಎಸ್. ಪಾಟೀಲ
Declare Muddebihal and Talikote taluks drought-hit: A.S. Patil
ತಾಳಿಕೋಟೆ, ಸೆ. 15: ವಿಜಯಪುರ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದರೂ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹೊರಗಿಟ್ಟಿರುವುದು ರೈತರಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಆರೋಪಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಕೊರತೆ, ಬೆಳೆಹಾನಿ ಹಾಗೂ ಕೃಷಿ ಸಂಕಷ್ಟದಿಂದ ರೈತರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ಕೆಲ ತಾಲೂಕುಗಳನ್ನು ಮಾತ್ರ ಬರಪೀಡಿತವೆಂದು ಘೋಷಿಸಿ, ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳನ್ನು ಕೈಬಿಟ್ಟಿರುವುದು ಸರ್ಕಾರದ ತಾರತಮ್ಯ ನೀತಿಗೆ ಸಾಕ್ಷಿಯಾಗಿದೆ ಎಂದು ದೂರಿದರು.
ಬರ ಘೋಷಣೆಯಾಗದ ಕಾರಣ ರೈತರಿಗೆ ಬರ ಪರಿಹಾರ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳು ಕೈತಪ್ಪುವ ಆತಂಕ ಎದುರಾಗಿದೆ. ಆದ್ದರಿಂದ ಯಾವುದೇ ವಿಳಂಬ ಮಾಡದೆ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.
“ಇದು ಯಾವುದೇ ವ್ಯಕ್ತಿ ಅಥವಾ ಪಕ್ಷದ ವಿರುದ್ಧದ ಹೋರಾಟವಲ್ಲ. ಸಂಕಷ್ಟದಲ್ಲಿರುವ ರೈತರ ಹಕ್ಕಿಗಾಗಿ ನಡೆಯುವ ಹೋರಾಟ. ಸರ್ಕಾರ ಕೂಡಲೇ ಬರ ಘೋಷಣೆ ಮಾಡಿದರೆ ಹೋರಾಟದ ಅಗತ್ಯವೇ ಇರುವುದಿಲ್ಲ,” ಎಂದು ನಡಹಳ್ಳಿ ಸ್ಪಷ್ಟಪಡಿಸಿದರು.
ಮುದ್ದೇಬಿಹಾಳ ಬಂದ್ ಮಾದರಿಯಲ್ಲಿ ತಾಳಿಕೋಟೆಯಲ್ಲಿಯೂ ಹೋರಾಟ ನಡೆಸಲು ವಿವಿಧ ಸಮುದಾಯಗಳ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಬೆಂಬಲ ನೀಡಿರುವುದು ರೈತರ ಸಮಸ್ಯೆಯ ತೀವ್ರತೆಯನ್ನು ತೋರಿಸುತ್ತದೆ. ಇದೇ ಒಗ್ಗಟ್ಟನ್ನು ತಾಳಿಕೋಟೆಯಲ್ಲಿಯೂ ರೂಪಿಸಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದರು.
ರೈತ ಮುಖಂಡರು, ವ್ಯಾಪಾರಸ್ಥರು, ವಿವಿಧ ಸಂಘಟನೆಗಳು ಹಾಗೂ ಜನಪರ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು. ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಸೇರಿದಂತೆ ಮುಖಂಡರೊಂದಿಗೆ ಚರ್ಚಿಸಿ ಹೋರಾಟದ ದಿನಾಂಕ ಪ್ರಕಟಿಸಲಾಗುವುದು. ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ದಿನಾಂಕ ನಿಗದಿಪಡಿಸಲಾಗುವುದು ಎಂದು ನಡಹಳ್ಳಿ ಹೇಳಿದರು.
“ತಾಳಿಕೋಟೆಯಲ್ಲಿ ಕೇವಲ ಸಾಂಕೇತಿಕ ಪ್ರತಿಭಟನೆ ನಡೆಸುವುದಿಲ್ಲ. ರೈತರ ಹಕ್ಕಿಗಾಗಿ ಐತಿಹಾಸಿಕ ಹೋರಾಟ ರೂಪಿಸಲಾಗುವುದು. ಜಂಟಿಯಾಗಿ ಹೋರಾಟ ನಡೆಸಿ ಸರ್ಕಾರದ ಮೇಲೆ ಒತ್ತಡ ತರಲಾಗುವುದು. ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ರೈತರಿಗೆ ನ್ಯಾಯ ದೊರೆಯುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ,” ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಶಂಕರಗೌಡ ದೇಸಾಯಿ, ವಿಶ್ವನಾಥರೆಡ್ಡಿ ಲಕ್ಕುಂಡಿ, ಬಸನಗೌಡ ವಣಿಕ್ಯಾಳ, ಗೌಡಪ್ಪಗೌಡ ಮಾಳಿ, ಎಂ.ಎಂ. ಪಾಟೀಲ ಸಾಲವಾಡಗಿ, ರಾಜುಗೌಡ ಕೋಳೂರ, ರಾಜುಗೌಡ ಗುಂಡಕನಾಳ, ಶಿವಶಂಕರ ಹಿರೇಮಠ, ಬಾಬುಗೌಡ ಕೊಡಗಾನೂರ, ಮಲ್ಲನಗೌಡ ಕೊಡಗಾನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 