ನವದೆಹಲಿ, ಡಿ 8 : ಅನಾಜ್ ಮಂಡಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಹತ್ತಿರದ ರಕ್ತ ಸಂಬಂಧಿಗಳಿಗೆ ಪ್ರಧಾನಿ ನರೇಂದ್ರಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ. ದುರಂತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ರೂ.ಪರಿಹಾರಕ್ಕೂ ಪ್ರಧಾನಿ ಅನುಮೋದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಬೆಂಕಿ ಅನಾಹುತವನ್ನು 'ಅತ್ಯಂತ ಭೀಕರ' ಎಂದು ಹೇಳಿರುವ ಪ್ರಧಾನಿಯವರು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳುವಂತಾಗಲಿ ಎಂದು ಹಾರೈಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್,'ದುರಂತದಲ್ಲಿ 40 ಕ್ಕೂ ಹೆಚ್ಚು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿಸಲಾಗಿದೆ. ತಪ್ಪಿತಸ್ಥರು ಕಾನೂನುನಿಂದ ತಪ್ಪಿಸಲಾಗುವುದಿಲ್ಲ.' ಎಂದು ಹೇಳಿದ್ದಾರೆ. 'ಕಳೆದುಹೋದ ಜೀವಗಳನ್ನು ಮರಳಿ ತರಲು ಸಾಧ್ಯವಿಲ್ಲ. ದೆಹಲಿ ಸರ್ಕಾರ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಗಾಯಗೊಂಡವರಿಗೆ ತಲಾ ಒಂದು ಲಕ್ಷ ರೂ.ಪರಿಹಾರ ನೀಡಲಿದೆ.' ಎಂದು ಕೇಜ್ರಿವಾಲ್ ಹೇಳಿದ್ದಾರೆ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. 'ತುರ್ತಾಗಿ ಸಾಧ್ಯವಿರುವ ಎಲ್ಲ ಸಹಾಯವನ್ನು ನತದೃಷ್ಟರ ಕುಟುಂಬದವರಿಗೆ ಮತ್ತು ಗಾಯಾಳುಗಳಿಗೆ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.' ಗೃಹ ಸಚಿವ ಅಮಿತ್ ಶಾ ಟ್ವೀಟ್ನಲ್ಲಿ ಹೇಳಿದ್ದಾರೆ.