ನವದೆಹಲಿ, ಫೆ 26 ; ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರ ಮತ್ತು ವಿರೋಧಿ ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಗೆ 20 ಮಂದಿ ಸಾವನ್ನಪ್ಪಿ, ನೂರಾರು ಮಂದಿ ಗಾಯಗೊಂಡ ನಂತರ ದೆಹಲಿಯ ಪರಿಸ್ಥಿತಿ ಕುರಿತು ಚರ್ಚಿಸಲು ಕಾಂಗ್ರೆಸ್ನ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಬುಧವಾರ ಬೆಳಿಗ್ಗೆ ಸಭೆ ಸೇರಿದೆ.
ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಈ ಸಭೆಯ ಅಧ್ಯಕ್ಷತೆಯನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ವಹಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ , ಮಾಜಿ ಗೃಹ ಸಚಿವ ಪಿ.ಚಿದಂಬರಂ ಮತ್ತು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಸೇರಿ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರ ಮತ್ತು ಗಲಭೆಯಿಂದ 20ಕ್ಕೂ ಅಧಿಕ ಜನರು ಬಲಿಯಾಗಿ, ನೂರಾರು ಜನರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಸೋನಿಯಾ ಗಾಂಧಿ ಅವರು ದೆಹಲಿಯ ಪಕ್ಷದ ಉಸ್ತುವಾರಿ ಶಕ್ತಿ ಸಿನ್ಹ್ ಗೋಹಿಲ್ ಅವರನ್ನು ಕರೆದು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ, ಉನ್ನತ ಮಟ್ಟದ ಸಭೆ ಕರೆಯಲು ಸೋನಿಯಾ ನಿರ್ಧರಿಸಿದ್ದರು.
ಪರಿಸ್ಥಿತಿ ಮತ್ತು ಹಿಂಸಾಚಾರವನ್ನು ನಿಯಂತ್ರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೈಗೊಂಡಿರುವ ಕ್ರಮಗಳ ಬಗ್ಗೆ ಪಕ್ಷ ಚರ್ಚಿಸಲಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಹಿಂಸಾಚಾರವನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸುವ ಸಾಧ್ಯತೆ ಇದೆ. ಜನರಲ್ಲಿ ವಿಶ್ವಾಸವನ್ನು ಮೂಡಿಸುವ ಕ್ರಮಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.
ಪಕ್ಷಪಾತ ಧೋರಣೆ ಮತ್ತು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಶಾಂತಿ ಮತ್ತು ಸಾಮರಸ್ಯ ಕಾಪಾಡಲು ಹಾಗೂ ನೀವು ಪಕ್ಷಗಳ ನಾಯಕರು ಮಾತ್ರವಲ್ಲ ಸಮಾಜದ ನಾಯಕರಾಗಬೇಕು ಎಂದು ಮಂಗಳವಾರ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಮತ್ತು ದೆಹಲಿ ಮುಖ್ಯಮಂತ್ರಿಗೆ ಮನವಿ ಮಾಡಿತ್ತು.
"ಇದು ಗಾಂಧಿಯವರ, ನೆಹರೂರವರ ಮತ್ತು ಪಟೇಲ್ ಅವರ ಭಾರತ, ಈ ಬುದ್ದಿಹೀನ ಹಿಂಸಾಚಾರವನ್ನು ಯಾವುದೇ ಭಾರತೀಯರು ಒಪ್ಪಿಕೊಳ್ಳಲು ಸಾಧ್ಯವೆ? ಎಂದು ಎಐಸಿಸಿ ಸಂವಹನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರಶ್ನಿಸಿದ್ದರು.