ಅನುದಾನಿತ ಶಾಲಾ ಶಿಕ್ಷಕರಿಗೆ ಹಳೆ ಪಿಂಚಣಿ ಜಾರಿಗೆ ಆಗ್ರಹ

ಅನುದಾನಿತ ಶಾಲಾ ಶಿಕ್ಷಕರಿಗೆ ಹಳೆ ಪಿಂಚಣಿ ಜಾರಿಗೆ ಆಗ್ರಹ  Demand for implementation of Old Pension Scheme for aided school teachers


ವಿಜಯಪುರ 28: ಅನುದಾನಿತ ಶಾಲಾ ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಅನುದಾನಿತ ಶಾಲೆಗಳ ಶಿಕ್ಷಕರು ಪಿಂಚಣಿ ಸೌಲಭ್ಯದಿಂದ ವಂಚಿತರಾಗಿದ್ದು, ಅವರಿಗೆ ಹಳೆ ಪಿಂಚಣಿ ಜಾರಿಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಸರ್ಕಾರಿ ಶಾಲೆಗಳಿಗೆ ದೊರೆಯುವ ಸೌಲಭ್ಯಗಳು ಅನುದಾನಿತ ಶಾಲೆಗಳಿಗೂ ದೊರೆಯಬೇಕು ಎಂದು ಹೇಳಿದರು.

ನವೆಂಬರ್ 17ರಿಂದ ನಡೆಯಲಿರುವ ಹೋರಾಟದಲ್ಲಿ ಅನುದಾನಿತ ಶಾಲೆಗಳ ಶಿಕ್ಷಕರು ಭಾಗವಹಿಸಿ ತಮ್ಮ ಬೇಡಿಕೆಗಳಿಗಾಗಿ ಹೋರಾಟ ನಡೆಸುವಂತೆ ಅವರು ಕರೆ ನೀಡಿದರು. ಸಹಕಾರ ಮತ್ತು ಜವಳಿ ಖಾತೆ ಸಚಿವ ರುದ್ರ​‍್ಪ ಲಮಾಣಿ ಮಾತನಾಡಿ, ಅನುದಾನಿತ ಶಾಲಾ ನೌಕರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಅವರಿಗೆ ಸರ್ಕಾರಿ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮುಖ್ಯಮಂತ್ರಿಯವರೊಂದಿಗೆ ಒಪಿಎಸ್ ಜಾರಿ ಕುರಿತು ಚರ್ಚಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ನುಗ್ಗಿ ಸೇರಿದಂತೆ ಹಲವು ಗಣ್ಯರು ಮಾತನಾಡಿದರು.

ಅನುದಾನಿತ ಶಾಲೆಗಳಿಗೂ ಸರ್ಕಾರಿ ಆದೇಶಗಳು ಅನ್ವಯವಾಗಬೇಕು ಹಾಗೂ ಉಚಿತ ವಿದ್ಯುತ್ ಸೌಲಭ್ಯ ದೊರೆಯಬೇಕು ಎಂದು ಆಗ್ರಹಿಸಲಾಯಿತು.  ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪಡೆದ 30 ಶಿಕ್ಷಕರು, ವಿಜಯಪುರ ಜಿಲ್ಲಾ ಪ್ರಶಸ್ತಿ ಪಡೆದ 11 ಶಿಕ್ಷಕರು ಹಾಗೂ ವಿಜಯಪುರದ 40 ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಎನ್‌.ಆರ್‌. ಕುಲಕರ್ಣಿ (ತಾಂಬಾ) ರಚಿಸಿದ ‘ಮಕ್ಕಳ ಲೋಕದ ಅಕ್ಷರ ಸಂತರು’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.  ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.