ಗುಂಡಕನಾಳ ಗ್ರಾಮದಲ್ಲಿ ದೌರ್ಜನ್ಯ ಖಂಡಿಸಿ ಕಠಿಣ ಕ್ರಮಕ್ಕೆ ಆಗ್ರಹ

ಗುಂಡಕನಾಳ ಗ್ರಾಮದಲ್ಲಿ ದೌರ್ಜನ್ಯ ಖಂಡಿಸಿ ಕಠಿಣ ಕ್ರಮಕ್ಕೆ ಆಗ್ರಹ  Demand for strict action condemning atrocities in Gundakanala village

ಲೋಕದರ್ಶನ ವರದಿ 

ವಿಜಯಪುರ 26: ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಗುಂಡಕನಾಳ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯದ ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ನಡೆಸಿ, ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಆಗ್ರಹಿಸಿದೆ.  ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.  

ಮಹಾಸಭಾದ ರಾಜ್ಯ ಉಪಾಧ್ಯಕ್ಷ ಬಿ.ಎಸ್‌. ಗಸ್ತಿ ಮಾತನಾಡಿ, ಗುಂಡಕನಾಳ ಗ್ರಾಮದ ಸವರ್ಣೀಯರಿಂದ ತೀವ್ರವಾಗಿ ಗಾಯಗೊಂಡಿರುವ 13 ಸಂತ್ರಸ್ತರಿಗೆ ಜೀವನಾಧಾರಕ್ಕಾಗಿ ತಲಾ 25 ಲಕ್ಷ ಪರಿಹಾರ ಹಾಗೂ ತಲಾ ಐದು ಎಕರೆ ಜಮೀನು ತಕ್ಷಣ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಗ್ರಾಮದ ಸುಮಾರು 80 ವಾಲ್ಮೀಕಿ ಸಮುದಾಯದ ಕುಟುಂಬಗಳಿಗೆ ಸೂಕ್ತ ಪುನರ್ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.  

ವಾಲ್ಮೀಕಿ ಸಮುದಾಯದ ನಿವಾಸಿಗಳಿಗೆ ಅನುಕೂಲವಾಗುವಂತೆ ಗ್ರಾಮದಲ್ಲೇ ಪ್ರತ್ಯೇಕ ಆಹಾರ ಧಾನ್ಯ ವಿತರಣಾ ಕೇಂದ್ರವನ್ನು ತಕ್ಷಣ ಮಂಜೂರು ಮಾಡಬೇಕು. ದೇವಾಲಯಗಳು ಸೇರಿದಂತೆ ಸಾರ್ವಜನಿಕ ಕ್ಷೇತ್ರಗಳಲ್ಲಿ ಸಮುದಾಯದ ಜನರಿಗೆ ಮುಕ್ತ ಪ್ರವೇಶ ಕಲ್ಪಿಸುವ ಮೂಲಕ ಸಾಮಾಜಿಕ ಸಮಾನತೆ ಖಾತರಿಪಡಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಅಮಾನವೀಯ ಘಟನೆಗಳು ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.