ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದವರಿಗೆ ಗಲ್ಲು ಶಿಕ್ಷೆ ಸೇರಿದಂತೆ ಕಠಿಣ ಕ್ರಮಕ್ಕೆ ಒತ್ತಾಯ

ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದವರಿಗೆ ಗಲ್ಲು ಶಿಕ್ಷೆ ಸೇರಿದಂತೆ ಕಠಿಣ ಕ್ರಮಕ್ಕೆ ಒತ್ತಾಯ Demand for stringent action, including the death penalty, against those who ruined students' futures

ಗದಗ, ಜು. 24: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳು ದೇಶದ ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಿವೆ ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣ ಎಚ್‌. ಹಡಪದ ಆರೋಪಿಸಿದ್ದಾರೆ.  

ಪತ್ರಿಕಾ ಪ್ರಕಟಣೆಯಲ್ಲಿ ಅವರು, ನೀಟ್ ಅಕ್ರಮವು ಕೇವಲ ಒಂದು ಪರೀಕ್ಷೆಯ ಅವ್ಯವಹಾರವಲ್ಲ; ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ದೊಡ್ಡ ಹೊಡೆತವಾಗಿದೆ ಎಂದು ಹೇಳಿದ್ದಾರೆ. ಹಣದ ಬಲದಿಂದ ಅರ್ಹತೆಯಿಲ್ಲದವರು ಅವಕಾಶ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ನಿಷ್ಠೆಯಿಂದ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.  

ಈ ಪ್ರಕರಣದಲ್ಲಿ ಮೇಲ್ಮೈ ತನಿಖೆ ನಡೆಸುವುದರಿಂದ ಪ್ರಯೋಜನವಿಲ್ಲ. ನೀಟ್ ಪರೀಕ್ಷೆಯ ಸಂಪೂರ್ಣ ಆಡಳಿತ ವ್ಯವಸ್ಥೆಯನ್ನು ಪರೀಶೀಲಿಸಿ, ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ದೇಶದ್ರೋಹ ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅಕ್ರಮದಿಂದ ಲಾಭ ಪಡೆದವರ ಆಸ್ತಿಯನ್ನು ಜಪ್ತಿ ಮಾಡಿ, ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.  

ಅಲ್ಲದೆ, ನೀಟ್ ಅಕ್ರಮದ ಬಗ್ಗೆ ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ನಷ್ಟಕ್ಕೊಳಗಾದ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.  

ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳಬಾರದು. ಅನ್ಯಾಯದ ವಿರುದ್ಧ ಕಾನೂನುಬದ್ಧ ಹೋರಾಟ ನಡೆಸಬೇಕು ಎಂದು ಕರೆ ನೀಡಿದ ಅವರು, ವಿದ್ಯಾರ್ಥಿಗಳ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.