ವಿಜಯಪುರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ

ವಿಜಯಪುರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ  Demand to declare Vijayapura district drought-hit

ವಿಜಯಪುರ ಸೆ. 4: 2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದ್ದು, ಕೇವಲ ಮೂರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಉಳಿದ 10 ತಾಲೂಕುಗಳನ್ನು ಕೈಬಿಟ್ಟಿರುವುದು ಖಂಡನೀಯ. ಜಿಲ್ಲೆಯ ಎಲ್ಲ 13 ತಾಲೂಕುಗಳನ್ನು ತಕ್ಷಣ ಬರಪೀಡಿತ ಎಂದು ಘೋಷಿಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.  

ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸುವಂತೆ ಒತ್ತಾಯಿಸಿ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೋಲಾರ ತಾಲೂಕು ಅಧ್ಯಕ್ಷ ಸೋಮು ಬಿರಾದಾರ, ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಬರದ ಪರಿಸ್ಥಿತಿ ಇದ್ದರೂ ಕೇವಲ ಮೂರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವುದು ಸರಿಯಲ್ಲ. ಉಳಿದ ತಾಲೂಕುಗಳನ್ನೂ ತಕ್ಷಣ ಬರಪೀಡಿತ ಎಂದು ಘೋಷಿಸಿ ಪರಿಹಾರ ಕಲ್ಪಿಸಬೇಕು. ಇಲ್ಲವಾದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.  

ಜಿಲ್ಲಾ ಕಾರ್ಯದರ್ಶಿ ವೀರಣ್ಣ ಸಜ್ಜನ ಮಾತನಾಡಿ, ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಬೆಳೆ ವಿಮೆ ಬಿಡುಗಡೆ ಮಾಡಬೇಕು. ರೈತರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸಬೇಕು. ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.  ಪ್ರತಿ ಎಕರೆಗೆ ?50 ಸಾವಿರ ಬರ ಪರಿಹಾರ, ಬೆಳೆ ವಿಮೆ ತುಂಬಿರುವ ರೈತರಿಗೆ ಶೇ.50ರಷ್ಟು ಮಧ್ಯಂತರ ವಿಮಾ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು. ಜಿಲ್ಲೆಯ ಎಲ್ಲ ಹಳ್ಳ, ಕೊಳ್ಳ, ಕೆರೆ ಹಾಗೂ ಕಾಲುವೆಗಳನ್ನು ತುಂಬಿಸಬೇಕು. ಜಾನುವಾರುಗಳಿಗೆ ಮೇವು ಮತ್ತು ನಿರುದ್ಯೋಗಿ ಯುವಕರಿಗೆ ಉದ್ಯೋಗ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.  ಜಿಲ್ಲಾ ಅಧ್ಯಕ್ಷ ಸಂಗಮೇಶ ಸಾಗರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ನೂರಾರು ರೈತರು ಹೋರಾಟಕ್ಕೆ ಬೆಂಬಲ ಸೂಚಿಸಿದರು.