ಬೆಂಗಳೂರು, ಜೂನ್ 28: ಸರ್ಕಾರ ಕೊರೊನಾ ತಡೆಗೆ ಕೈಗೊಂಡ ಕ್ರಮಗಳು ಖರ್ಚು-ವೆಚ್ಚಗಳ ಬಗ್ಗೆ ಶ್ವೇತಪತ್ರವನ್ನು ಹೊರಡಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಆಗ್ರಹಿಸಿದ್ದಾರೆ.ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪಾರದರ್ಶಕ ರೀತಿಯಲ್ಲಿ ಕ್ರಮಕೈಗೊಳ್ಳದೆ ಇರುವ ಕಾರಣಕ್ಕೆ ಜನರಲ್ಲಿ ಅನುಮಾನ, ಅಸುರಕ್ಷತೆ, ಅಭದ್ರತೆ ಮೂಡಿದೆ. ಹೀಗಾಗಿ ಸಂಪೂರ್ಣ ವಿವರವನ್ನು ಜನತೆಯ ಮುಂದಿಟ್ಟು ಜನರಲ್ಲಿ ವಿಶ್ವಾಸ ಮೂಡಿಸಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ.ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಯಾವ ಉದ್ದೇಶಗಳಿಗೆ ಹಣ ಬಳಕೆಯಾಗಿದೆ? ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್ ಆಮ್ಲಜನಕ ಸಿಲಿಂಡರ್, ಮಾಸ್ಕ್, ಸಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು? ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವ ಅನುದಾನ ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು? ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು? ಯಾವ ಮಾನದಂಡದ ಆಧಾರದಲ್ಲಿ ಖಾಸಗಿ ಆಸ್ಪತ್ರೆಗಳ ಶುಲ್ಕ ನಿಗದಿಪಡಿಸಿದೆ? ಈ ಎಲ್ಲ ವಿವರಗಳನ್ನು ರಾಜ್ಯ ಸರ್ಕಾರ ಜನತೆಯ ಮುಂದಿಡುವಂತೆ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ತಾವು ಹಲವಾರು ಪತ್ರಗಳನ್ನು ಬರೆದು ವಿವರವನ್ನು ಕೇಳಿದರೂ ಸಹ ಇಲಾಖೆಗಳು ಸರಿಯಾದ ಮಾಹಿತಿ ಕೊಡುತ್ತಿಲ್ಲ. ಇದರಿಂದ ತಮ್ಮ ಹಕ್ಕುಚ್ಯುತಿಯಾಗುವ ಜೊತೆಗೆ ಸರ್ಕಾರದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ರಾಜ್ಯದ 9 ಜಿಲ್ಲೆಗಳಲ್ಲಿ ದೇಶಕ್ಕೆ ಒಂದು ದಿನ ಮೊದಲು ಮಾರ್ಚ್ 23ರಂದು ಲಾಕ್ ಡೌನ್ ಘೋಷಿಸಲಾಯಿತು. ಆಗ ರಾಜ್ಯದಲ್ಲಿ ಒಂದೇ ಒಂದು ಸಾವು ಸಂಭವಿಸಿರಲಿಲ್ಲ, 26 ಮಂದಿ ಸೋಂಕಿತರು ಮಾತ್ರ ಇದ್ದರು. ಇಂದಿನ ವರದಿಯ ಪ್ರಕಾರ ರಾಜ್ಯದ ಸೋಂಕಿತರ ಸಂಖ್ಯೆ 11,923, ಸಾವಿಗೀಡಾದವರ ಸಂಖ್ಯೆ 191 ದಾಟಿದೆ. ಆಗ ಬೆಂಗಳೂರು ಮತ್ತು ಕೆಲವು ಜಿಲ್ಲಾ ಕೇಂದ್ರಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ವ್ಯಾಪಕವಾಗಿ ಹರಡಿದೆ.
ಕಳೆದ ಮೂರು ತಿಂಗಳ ಅವಧಿಯನ್ನು ಕೇವಲ ಲಾಕ್ ಡೌನ್ ಹೇರಿಕೆ ಮತ್ತು ಹಿಂದೆಗೆತದಲ್ಲಿ ವ್ಯರ್ಥವಾಗಿ ಕಳೆದ ರಾಜ್ಯ ಸರ್ಕಾರ ಅದನ್ನು ಎದುರಿಸಲು ಯಾವ ತಯಾರಿಯನ್ನೂ ನಡೆಸಿಲ್ಲ. ಮೂರು ತಿಂಗಳ ಅಮೂಲ್ಯ ಸಮಯವನ್ನು ರಾಜ್ಯ ಸರ್ಕಾರ ತನ್ನ ಬೇಜವಾಬ್ದಾರಿತನದಿಂದ ವ್ಯರ್ಥಮಾಡಿದೆ. ಈ ನಿಷ್ಕ್ರಿಯತೆಯ ಫಲವನ್ನು ರಾಜ್ಯದ ಜನತೆ ಅನುಭವಿಸಿದಂತಾಗಿದೆ ಎಂದು ಅವರು ದೂರಿದ್ದಾರೆ.ರಾಜ್ಯದಲ್ಲಿ ಕೊರೊನಾ ಸೋಂಕು ಯಾವ ರಾಜ್ಯ ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿರುವ ರಾಜ್ಯದ ಜನತೆ ಕೊರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ಈಗಾಗಲೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ತುಂಬಿ ಹೋಗಿವೆ. ಖಾಸಗಿ ಆಸ್ಪತ್ರೆಗಳು ಸರ್ಕಾರ ಒಪ್ಪಿಕೊಂಡಿರುವ ಚಿಕಿತ್ಸಾ ಶುಲ್ಕಕ್ಕೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿದ್ದು ಸರ್ಕಾರ ಖಾಸಗಿ ಆಸ್ಪತ್ರೆಗಳನ್ನು ಒಪ್ಪಿಸಬೇಕು, ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ರಾಜ್ಯ ಸರ್ಕಾರ ತಕ್ಷಣ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ಶ್ವೇತಪತ್ರವನ್ನು ಹೊರಡಿಸಿ ನಿಜ ಪರಿಸ್ಥಿತಿಯನ್ನು ಜನರ ಮುಂದಿಟ್ಟು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕು ನಿಯಂತ್ರಣದಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರ ಇದೇ ರೀತಿಯ ಉದಾಸೀನ-ಉಡಾಫೆತನವನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ ವಾಗಬಹುದೆಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.