ಕರ್ತವ್ಯ ಲೋಪ ಸಹಿಸಲ್ಲ: ಶಾಸಕ ಕೃಷ್ಣನಾಯಕ್

ಕರ್ತವ್ಯ ಲೋಪ ಸಹಿಸಲ್ಲ: ಶಾಸಕ ಕೃಷ್ಣನಾಯಕ್  Dereliction of duty will not be tolerated: MLA Krishna Nayak


ಹೂವಿನಹಡಗಲಿ, ಸೆ.19: ತಾಲೂಕಿನಲ್ಲಿ ಅಧಿಕಾರಿಗಳ ಕರ್ತವ್ಯ ಲೋಪವನ್ನು ಸಹಿಸುವುದಿಲ್ಲ ಎಂದು ಶಾಸಕ ಕೃಷ್ಣನಾಯಕ್ ಎಚ್ಚರಿಕೆ ನೀಡಿದರು.  ಪಟ್ಟಣದ ಗವಿಮಠದ ಶಿವಶಾಂತವೀರ ಸಮುದಾಯ ಭವನದಲ್ಲಿ ಶನಿವಾರ ನಡೆದ ಪ್ರಜಾ ಸೇವಾ ಆಂದೋಲನ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಕರ್ತವ್ಯ ಲೋಪ ಮಾಡದೆ ಕೂಡಲೇ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು.  

ಆಡಳಿತದ ಕಾರ್ಯಕ್ಷಮತೆ, ಜನಸೇವೆ, ಅಭಿವೃದ್ಧಿ ಹಾಗೂ ಅಧಿಕಾರಿಗಳ ಹೊಣೆಗಾರಿಕೆ ಕುರಿತು ಸ್ಪಷ್ಟ ಸಂದೇಶ ನೀಡಿದ ಅವರು, ಕಾನೂನಿನ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು ಎಂದರು.  

ತಹಶೀಲ್ದಾರ್ ಕೆ.ಎಂ. ಗುರುಬಸವರಾಜ ಮಾತನಾಡಿ, ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸಲು ಸರ್ಕಾರ ಜಾರಿಗೊಳಿಸಿರುವ ಪ್ರಜಾ ಸೇವಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಪ್ರತೀ ಶನಿವಾರ ನಡೆಯುವ ಪ್ರಜಾ ಸೇವಾ ಕಾರ್ಯಕ್ರಮದ ಮೂಲಕ ಕಾನೂನಿನ ವ್ಯಾಪ್ತಿಯಲ್ಲಿ ಸಾಧ್ಯವಿರುವ ಸಮಸ್ಯೆಗಳನ್ನು ವಿಳಂಬವಿಲ್ಲದೆ ಪರಿಹರಿಸಲಾಗುವುದು ಎಂದರು.  

ತಾ.ಪಂ. ಇಒ ಪರಮೇಶ್ವರ ಮಾತನಾಡಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ. ಕೊಟ್ರಗೌಡ, ಪುರಸಭೆ ಮುಖ್ಯಾಧಿಕಾರಿ ಹನುಮಂತಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.  ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗೆ ಒಟ್ಟು 51 ಅರ್ಜಿಗಳು ಸಲ್ಲಿಕೆಯಾಗಿದ್ದು, ಸ್ಥಳದಲ್ಲೇ 7 ಅರ್ಜಿಗಳನ್ನು ಇತ್ಯರ್ಥಪಡಿಸಲಾಯಿತು.