ಮೌನಕ್ರಾಂತಿಯ ಹರಿಕಾರ ದೇವರಾಜ ಅರಸು: ಶಿಗ್ಗಾವಿಯಲ್ಲಿ 111ನೇ ಜನ್ಮದಿನಾಚರಣೆ
Devaraj Urs, Pioneer of the Silent Revolution: 111th Birth Anniversary Celebrated in Shiggaon
ಲೋಕದರ್ಶನ ವರದಿ
ಶಿಗ್ಗಾವಿ, ಆ. 23: ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಕಚೇರಿಗಳ ಸಂಕೀರ್ಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮೌನಕ್ರಾಂತಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎ.ಸಿ. ವಾಲಿ ಮಹಾರಾಜರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭೂಹೀನ ರೈತರಿಗೆ ಭೂಮಿ ಒದಗಿಸಿದ ಮಹಾನ್ ನಾಯಕ
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎ.ಸಿ. ವಾಲಿ ಮಹಾರಾಜರು, “ಉಳುವವನೇ ಭೂಮಿಯ ಒಡೆಯ” ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಭೂಮಿಯಿಲ್ಲದ ಕೃಷಿಕರಿಗೆ ಜಮೀನು ಒದಗಿಸಿ, ಅವರ ಬದುಕಿಗೆ ಹೊಸ ಭರವಸೆ ನೀಡಿದ ಮಹಾನ್ ನಾಯಕ ದೇವರಾಜ ಅರಸು. ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ಆಶಯಗಳ ಮೂಲಕ ಅವರು ಜನರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ,” ಎಂದು ಹೇಳಿದರು.
ದೇವರಾಜ ಅರಸು ಅವರು ತಮ್ಮ ಆಡಳಿತಾವಧಿಯಲ್ಲಿ ಕೃಷಿಕರು, ಬಡ ಕೂಲಿಕಾರರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದರು. ಅನೇಕ ಸಮಸ್ಯೆ ಹಾಗೂ ಸವಾಲುಗಳನ್ನು ಎದುರಿಸಿ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಶ್ರಮಿಸಿದ್ದರು. ಶೋಷಿತ ಜನರಲ್ಲಿ ಆತ್ಮವಿಶ್ವಾಸ ಮೂಡಿಸಿ, ಅವರಿಗೆ ನ್ಯಾಯಯುತ ಹಕ್ಕುಗಳನ್ನು ದೊರಕಿಸಿಕೊಟ್ಟ ಪರಿಣಾಮ ಜನರು ಸ್ವಾಭಿಮಾನದಿಂದ ಬದುಕುವ ಕನಸು ಕಾಣುವಂತಾಯಿತು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಸಮಾನತೆಗಾಗಿ ಅರಸು ಅವರ ಕೊಡುಗೆ ಅಪಾರ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ಸಾಲೇಸೋಂಕಿ ಮಾತನಾಡಿ, ದೇವರಾಜ ಅರಸು ಅವರು ಜೀತ ಪದ್ಧತಿ ನಿರ್ಮೂಲನೆ ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಸಮಾನತೆಯ ಆಶಯವನ್ನು ಬಲಪಡಿಸಿದರು. ದುಡಿಯುವ ಕೈಗಳಿಗೆ ಉದ್ಯೋಗಾವಕಾಶ ಕಲ್ಪಿಸಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಉತ್ತೇಜನ ನೀಡಿದರು. ವಸತಿ ಶಾಲೆಗಳನ್ನು ಆರಂಭಿಸುವ ಮೂಲಕ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಪ್ರಗತಿಗೂ ಮಹತ್ವದ ಕೊಡುಗೆ ನೀಡಿದರು ಎಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಇಂದುಧರ ಮುತ್ತಳ್ಳಿ ಹಾಗೂ ಸರ್ಕಾರಿ ಐಟಿಐ ಕಾಲೇಜಿನ ಉಪನ್ಯಾಸಕ ಶಶಿಕಾಂತ ರಾಠೋಡ ಉಪನ್ಯಾಸ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 