ಗಣ್ಯರಿಂದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾರ್ಥೀವ ಶರೀರ ಅಂತಿಮ ದರ್ಶನ: ಸಂತಾಪ

Dignitaries paid their last respects to former Prime Minister Manmohan Singh

ನವದೆಹಲಿ 27: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರ ದೆಹಲಿಯ ಅವರ  ನಿವಾಸದಲ್ಲಿದ್ದು, ಗಣ್ಯಾತಿಗಣ್ಯರು ಸಿಂಗ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ಮನಮೋಹನ್‌ ಸಿಂಗ್‌ ಅವರ ನಿವಾಸಕ್ಕೆ ಭೇಟಿ ನೀಡಿ, ಅಂತಿಮ ದರ್ಶನ ಪಡೆದರು.

ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಮೋದಿಯವರು, ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು.

ಪ್ರಧಾನಿ ಮೋದಿ ಅವರ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಜೆಪಿ ನಡ್ಡಾ ಸಹಿತ ಇತರೆ ಬಿಜೆಪಿ ನಾಯಕರು ಸಿಂಗ್ ಸ್ವಗೃಹಕ್ಕೆ ಬಂದು ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸಿದರು.

ಕಾಂಗ್ರೆಸ್​ ನಾಯಕರಾದ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ, ಸಂಸದ ರಾಹುಲ್​ ಗಾಂಧಿ, ಹಾಗೂ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಡಾ. ಸಿಂಗ್​ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಮನಮೋಹನ್ ಸಿಂಗ್ ಅವರಿಗೆ ಅವರ ನಿವಾಸದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಭಾರತ ಎಂದೆಂದಿಗೂ ಸ್ಮರಿಸುತ್ತದೆ ಎಂದು ಹೇಳಿದ್ದಾರೆ.

ನಾಳೆ ಡಾ.ಮನಮೋಹನ್‌ ಸಿಂಗ್ ಅವರ ಅಂತಿಮ ದರ್ಶನ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದ್ದು, ನಂತರ ದೆಹಲಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.