ಸಾರ್ವಜನಿಕರ ಕೆಲಸ ನಿರ್ಲಕ್ಷಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಶಾಸಕ ಜೆ.ಟಿ. ಪಾಟೀಲ
Disciplinary action against officials who neglected public work: MLA J.T. Patil
ಲೋಕದರ್ಶನ ವರದಿ
ಬೀಳಗಿ 19: ಸಾರ್ವಜನಿಕರ ದೂರವಾಣಿ ಕರೆಗಳನ್ನು ಸ್ವೀಕರಿಸದೆ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹಟಗಾರ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಟಿ. ಪಾಟೀಲ ಎಚ್ಚರಿಸಿದರು. ಸಿದ್ದಾಪುರ ಗ್ರಾಮದ ವಾಲ್ಮೀಕಿ ಸಮುದಾಯ ಭವನದಲ್ಲಿ ತಾಲೂಕು ಆಡಳಿತ, ಬೀಳಗಿ ಹಾಗೂ ಪ್ರಜಾಸೇವೆ ಇಲಾಖೆ ಆಶ್ರಯದಲ್ಲಿ ಶನಿವಾರ ನಡೆದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದು ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಹಮ್ಮಿಕೊಂಡಿದೆ. ಗ್ರಾಮಸ್ಥರು ತಮ್ಮ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬೇಕು. ಸರ್ಕಾರಿ ಆಸ್ತಿಯನ್ನು ಸಾರ್ವಜನಿಕರು ತಮ್ಮ ಸ್ವಂತ ಆಸ್ತಿಯಂತೆ ಸಂರಕ್ಷಿಸಬೇಕು. ರಸ್ತೆ, ಕುಡಿಯುವ ನೀರು, ಶಾಲಾ ಕಟ್ಟಡ ಸೇರಿದಂತೆ ಮೂಲಸೌಕರ್ಯಗಳ ಕುರಿತು ಜನರು ಹೆಚ್ಚಿನ ಗಮನಹರಿಸಬೇಕು ಎಂದು ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶೇ.7.5ರಷ್ಟು ಮೀಸಲಾತಿ ಕಲ್ಪಿಸಿದ್ದಾರೆ ಎಂದು ಶಾಸಕ ಜೆ.ಟಿ. ಪಾಟೀಲ ತಿಳಿಸಿದರು.
ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ ಸಭೆಗೆ ಗೈರುಹಾಜರಾಗಿದ್ದ ವಲಯ ಅರಣ್ಯಾಧಿಕಾರಿ ಅಮೃತ ಗಂಡಗೋಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕರು ಸ್ಥಳದಲ್ಲೇ ಡಿಎಫ್ಒ ಅವರಿಗೆ ಸೂಚಿಸಿದರು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸದೆ ಅಸಭ್ಯವಾಗಿ ಮಾತನಾಡುತ್ತಾರೆ ಎಂದು ಶ್ರೀಶೈಲ ಅಂಟಿನ ಆರೋಪಿಸಿದ ಹಿನ್ನೆಲೆಯಲ್ಲಿ, ಅಧಿಕಾರಿಯ ವಿರುದ್ಧ ಲಿಖಿತ ದೂರು ನೀಡುವಂತೆ ಶಾಸಕರು ತಿಳಿಸಿದರು.
ಸರಿಯಾದ ಸಮಯಕ್ಕೆ ಗ್ರಾಮಸಭೆ ನಡೆಸದ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಕನಿಷ್ಠ 100 ಜನರನ್ನು ಸೇರಿಸಿ ಗ್ರಾಮಸಭೆ ನಡೆಸಬೇಕು. ಗ್ರಾಮಕ್ಕೆ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಾರ್ವಜನಿಕರಿಂದ ಬೇಡಿಕೆಗಳನ್ನು ಪಡೆದು ಗ್ರಾಮಸಭೆಯಲ್ಲೇ ದಾಖಲಿಸಬೇಕು ಎಂದು ಸೂಚಿಸಿದರು. ತಹಶೀಲ್ದಾರ್ ವಿನೋದ ಹತ್ತಳ್ಳಿ ಮಾತನಾಡಿ, ಪ್ರಜಾಸೇವಾ ಆಂದೋಲನ ವಿನೂತನ ಕಾರ್ಯಕ್ರಮವಾಗಿದ್ದು, ಸಲ್ಲಿಕೆಯಾಗುವ ಅರ್ಜಿಗಳನ್ನು 21 ದಿನಗಳೊಳಗೆ ತ್ವರಿತವಾಗಿ ವಿಲೇವಾರಿ ಮಾಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ಪಾಟೀಲ ಮಾತನಾಡಿ, ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ಹಾಗೂ ತಾಲೂಕು ಮಟ್ಟದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲು ತೀರ್ಮಾನಿಸಿದೆ. ಅರ್ಹರು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯಿತಿ ಹಾಗೂ ‘ಗ್ರಾಮ ಒನ್’ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 