ಅನುದಾನ ನೀಡಿಕೆಯಲ್ಲಿ ತಾರತಮ್ಯ: ಬಿಬಿಎಂಪಿ ಸದಸ್ಯರಿಂದ ಪ್ರತಿಭಟನೆ

ಬೆಂಗಳೂರು, ಅ.31: ಕಾಂಗ್ರೆಸ್, ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ನೀಡಿದ ಅನುದಾನವನ್ನು ಬಿಜೆಪಿ ಸರ್ಕಾರ ಕಡಿತಗೊಳಿಸಿದೆ ಎಂದು ಆರೋಪಿಸಿ ಪ್ರತಿಪಕ್ಷದ ಬಿಬಿಎಂಪಿ ಸದಸ್ಯರು ಪಾಲಿಕೆ ಕೇಂದ್ರ ಕಚೇರಿಯ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

 ಮಾಜಿ ಸಚಿವ ಹಾಗೂ ಶಾಸಕ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಸೇರಿದ ಕಾಂಗ್ರೆಸ್‌ನ ಬಿಬಿಎಂಪಿ ಸದಸ್ಯರು ಮುಖಂಡರು ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

 ರಾಮಲಿಂಗಾರೆಡ್ಡಿ ಮಾತನಾಡಿ, ಸರ್ಕಾರ ಬಂದು 6 ತಿಂಗಳಾದರೂ ನಗರದ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ. ನಾಳೆ ಇಲ್ಲವೇ ನಾಳಿದ್ದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಅವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರಿಗೆ ನೀಡಿದ ಅನುದಾನವನ್ನು ಕಡಿತಗೊಳಿಸಿರುವ ಬಿಜೆಪಿ ಸರ್ಕಾರ ಅದನ್ನು ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಹಂಚಲಾಗಿದೆ. ಅಭಿವೃದ್ಧಿ ವಿಷಯದಲ್ಲಿ ತಾರತಮ್ಯವೆಸಗಲಾಗುತ್ತಿದೆ ಎಂದು ಟೀಕಿಸಿದರು.

 ಬಿಜೆಪಿ ಸರ್ಕಾರದ ಅವಧಿಯಲ್ಲಿ 11 ಕಾಂಗ್ರೆಸ್ ಕ್ಷೇತ್ರಗಳ ಶಾಸಕರಿಗೆ ನೀಡಿರುವ ಅನುದಾನ ಕೇವಲ 943 ಕೋಟಿ ಆದರೆ 11 ಬಿಜೆಪಿ ಕ್ಷೇತ್ರಗಳ ಶಾಸಕರುಗಳಿಗೆ 3 499 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ದೂರಿದರು.

 ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜೀದ್, ಮಾಜಿ ಮೇಯರ್ ಗಳಾದ ಮಂಜುನಾಥರೆಡ್ಡಿ, ಸಂಪತ್‌ರಾಜ್, ಪದ್ಮಾವತಿ, ಮಾಜಿ ಆಡಳಿತ ಪಕ್ಷದ ನಾಯಕರಾದ ಸತ್ಯನಾರಾಯಣ, ಶಿವರಾಜ್ ಹಾಗೂ ಕಾಂಗ್ರೆಸ್ ಸದಸ್ಯರು ಪಾಲ್ಗೊಂಡಿದ್ದರು.