ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿ ವಿತರಣೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿ ವಿತರಣೆ  Distribution of free learning materials to government school students

ಬಳ್ಳಾರಿ 23: ಬಳ್ಳಾರಿ ಸೇವಾ ಸಮಿತಿಯ ವತಿಯಿಂದ ಬಸವೇಶ್ವರ ಕ್ಯಾಂಪ್ನ ಕಪ್ಪಗಲ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಗುರುವಾರ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮ ಆಯೋಜಿಸಲಾಯಿತು.  

ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶ್ರೀ ಅವ್ವಾರು ಮಂಜುನಾಥ್ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಲಿಕಾ ಸಾಮಗ್ರಿಗಳನ್ನು ವಿತರಿಸುತ್ತಿರುವ ಬಳ್ಳಾರಿ ಸೇವಾ ಸಮಿತಿಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  

ವಿದ್ಯಾರ್ಥಿಗಳು ಇಂತಹ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ಶಿಕ್ಷಣದ ಮೂಲಕ ಜೀವನದಲ್ಲಿ ಉನ್ನತ ಸಾಧನೆ ಮಾಡಿ ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ಕರೆ ನೀಡಿದರು.  

ಕಾರ್ಯಕ್ರಮದಲ್ಲಿ ಮಾತನಾಡಿದ ಜಯಪ್ರಕಾಶ್ ಗುಪ್ತಾ, ಭಾರತದ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜೀವನ ಚರಿತ್ರೆ ಹಾಗೂ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ಕನಸು ಕಾಣುವುದರ ಜೊತೆಗೆ ಅದನ್ನು ಸಾಕಾರಗೊಳಿಸಲು ನಿರಂತರ ಪರಿಶ್ರಮ ಅಗತ್ಯ ಎಂದು ತಿಳಿಸಿದರು.  

ಈ ಸಂದರ್ಭದಲ್ಲಿ ಸುಮಾರು 150 ವಿದ್ಯಾರ್ಥಿಗಳಿಗೆ ಪೆನ್ನು, ಪೆನ್ಸಿಲ್, ನೋಟ್ಪುಸ್ತಕ, ಶಾಲಾ ಬ್ಯಾಗ್, ಕಂಪಾಸ್ ಬಾಕ್ಸ್‌ ಸೇರಿದಂತೆ ವಿವಿಧ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು.  

ಕಾರ್ಯಕ್ರಮದಲ್ಲಿ ಬಳ್ಳಾರಿ ಸೇವಾ ಸಮಿತಿಯ ಅಧ್ಯಕ್ಷ ಬಿ. ಸುರೇಂದ್ರ ಕುಮಾರ್ ಭಾಫನ್, ಕಾರ್ಯದರ್ಶಿ ವಿ. ರಾಮಚಂದ್ರ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಾಜಿ ಅಧ್ಯಕ್ಷ ಬಿ. ಮಹಾರುದ್ರಗೌಡ, ಜಯಪ್ರಕಾಶ್ ಗುಪ್ತಾ, ಗ್ರಾಮ ಪಂಚಾಯಿತಿ ಸದಸ್ಯೆ ಶಾಂತಮ್ಮ, ಕಪ್ಪಗಲ್ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್, ವಿಜಯಕುಮಾರ್, ಬಳ್ಳಾರಿ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.  ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮತ್ತು ಆತ್ಮವಿಶ್ವಾಸ ಬೆಳೆಸುವ ಉದ್ದೇಶದೊಂದಿಗೆ ಯಶಸ್ವಿಯಾಗಿ ನಡೆಯಿತು.