ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ
ಕೊಪ್ಪಳ 06: 2024-25ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ಗಳನ್ನು ನೀಡುತ್ತಿದ್ದು, ಶನಿವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಈ ಕಿಟಗಳನ್ನು ಪತ್ರಕರ್ತರಿಗೆ ವಿತರಿಸಿದರು.
ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿ ಪತ್ರಕರ್ತರಿಗೆ ಲ್ಯಾಪ್ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡಲಾಗುತ್ತಿದೆ.
ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹೊರತಂದ ಕೊಪ್ಪಳ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ ಒಳಗೊಂಡ ಕಿರು ಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಿಲ್ಲಾ ವಾರ್ತಾಧಿಕಾರಿ ಡಾ. ಸುರೇಶ ಜಿ. ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.