ಮುಂದಿನ ವರ್ಷ ಸರ್ಕಾರಿ ಶಾಲಾ ಮಕ್ಕಳಿಗೆ ಟ್ಯಾಬ್ ವಿತರಿಸಿ: ಕೇಂದ್ರಕ್ಕೆ ಸುರೇಶ್ ಕುಮಾರ್ ಮನವಿ

ಬೆಂಗಳೂರು, ಏ 29; ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ಪರಿಸ್ಥಿತಿ ಸಹಜತೆಗೆ ಮರಳಿದ ಬಳಿಕ ವಿದ್ಯಾರ್ಥಿ ಜೀವನದ ಬಹುಮುಖ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಖ್ರಿಯಾಲ್ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗಿಯಾದ ಅವರು, ಪರೀಕ್ಷೆ ನಡೆಸಲು ಸರ್ಕಾರ ಎಲ್ಲಾ ರೀತಿಯಲ್ಲಿ ಪರಿಶೀಲನೆ ನಡೆಸುತ್ತಿದೆ. ಈ ಬಾರಿ ೮ ಲಕ್ಷದ ೫೦ ಸಾವಿರ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.  ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳ ಬಡ ಮಕ್ಕಳಿಗೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಟ್ಯಾಬ್‌ಗಳನ್ನು ಒದಗಿಸಬೇಕು, ಬಹುತೇಕ ವಿದ್ಯಾರ್ಥಿಗಳು ಬಡ ಕುಟುಂಬಗಳಿಗೆ ಸೇರಿದ್ದು, ಇಂತಹ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಒದಗಿಸಲು ಆಧುನಿಕ ಸಲಕರಣೆಗಳ ಅಗತ್ಯವಿದೆ ಎಂದು ಕೇಂದ್ರ ಸಚಿವರಿಗೆ ಸುರೇಶ್ ಕುಮಾರ್ ಮನವಿ ಮಾಡಿದರು.