ನೀಟ್ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಪರೀಕ್ಷಾ ಕೇಂದ್ರಗಳ ಪರೀಶೀಲನೆ

ನೀಟ್ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಪರೀಕ್ಷಾ ಕೇಂದ್ರಗಳ  ಪರೀಶೀಲನೆ District Collector visits NEET exam center: Inspection of exam centers

ಲೋಕದರ್ಶನ ವರದಿ 

ವಿಜಯಪುರ 21 : ಜಿಲ್ಲೆಯಾದ್ಯಂತ ಭಾನುವಾರ ಬಿಗಿ ಪೊಲೀಸ್ ಬಂದೋಬಸ್ತ್‌ ನಲ್ಲಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (ನೀಟ್) ಪರೀಕ್ಷೆಯನ್ನು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಪರೀಶೀಲಿಸಿದರು. ನಗರದ 19 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ನೀಟ್ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು, ನಗರದ ಅಥಣಿ ರಸ್ತೆಯಲ್ಲಿರುವ ಕಾಳಿದಾಸ ವಿಜ್ಞಾನ ಪದವಿ ಪೂರ್ವ ಕಾಲೇಜ್ ಹಾಗೂ ಟಕ್ಕೆಯಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ ನೀಟ್ ಪರೀಕ್ಷಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರೀಶೀಲಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡಿರುವ ಸಿದ್ಧತೆಗಳು, ಭದ್ರತಾ ವ್ಯವಸ್ಥೆಗಳು ಹಾಗೂ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿರುವ ಮೂಲಸೌಕರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. 

ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲ ಅಥವಾ ತೊಂದರೆಗೆ ಒಳಗಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದನ್ನು ಖಚಿತಪಡಿಸಿಕೊಂಡ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು,ಆಸನ ವ್ಯವಸ್ಥೆ, ವಿದ್ಯುತ್ ಪೂರೈಕೆ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳು ಸಮರ​‍್ಕವಾಗಿ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳುವಂತೆ ತಿಳಿಸಿದರು. ಪರೀಕ್ಷೆ ಬರೆಯಲು ಆಗಮಿಸಿರುವ ವಿದ್ಯಾರ್ಥಿಗಳು ನೆಮ್ಮದಿಯ ಹಾಗೂ ಅನುಕೂಲಕರ ವಾತಾವರಣದಲ್ಲಿ ಪರೀಕ್ಷೆ ಎದುರಿಸಲು ಅವಕಾಶ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.