ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನೀಟ್ ಪರೀಕ್ಷೆ ನಡೆಸಲು ಸೂಚನೆ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
District Magistrate Dr. Vijayamahantesh Danamma issues instructions to conduct NEET exams in a trans
ಲೋಕದರ್ಶನ ವರದಿ
ಹಾವೇರಿ 28 : ಜಿಲ್ಲೆಯಲ್ಲಿ 2026 ನೇ ಸಾಲಿನ ನೀಟ್ ಪರೀಕ್ಷೆ ಇದೇ ಮೇ 3 ರಂದು ರವಿವಾರ ಹಾವೇರಿ ನಗರದ ಐದು ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ನೀಟ್ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಎಲ್ಲರೂ ಪರೀಕ್ಷಾ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದರು.
ನೀಟ್ ಪರೀಕ್ಷೆ ಬಹಳ ಸೂಕ್ಷ್ಮವಾಗಿದೆ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಸ್ಕಾ-್ವಡ್ಗಳು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕೆಲಸಮಾಡಬೇಕು ಎಂದು ನಿರ್ದೇಶನ ನೀಡಿದರು.
ಸಿಸಿ ಟಿವಿ-ಜಾಮರ್: ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಕೆ, ಜಾಮರ್ ಹಾಗೂ ಕೊಠಡಿಯೊಳಗೆ ಗಡಿಯಾರ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದರು. ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ: ಪರೀಕ್ಷಾರ್ಥಿಗಳು ಹಾಗೂ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಇಯರ್ ಫೋನ್ಗಳು, ಮೈಕ್ರೋಫೋನ್, ಪೇಜರ್, ವೈರಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲಕ್ಯುಲೇಟರ್ ಹಾಗೂ ಗಡಿಯಾರಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.
ವಸ್ತ್ರ ಸಂಹಿತೆ: ನಿಗದಿಪಡಿಸಿದ ವಸ್ತ್ರ ಸಂಹಿತೆ(ಡ್ರೆಸ್ ಕೋಡ್)ನ್ನು ಪ್ರತಿಯೊಬ್ಬ ಅಭ್ಯರ್ಥಿಯು ಕಡ್ಡಾಯವಾಗಿ ಪಾಲಿಸಬೇಕು. ಉದ್ದ ತೋಳಿನ ಹಾಗೂ ತಲೆ ಮುಚ್ಚುವ ಉಡುಪು ಧರಿಸಿ ಬರುವಂತಿಲ್ಲ. ಬೆಲ್ಟ್, ಟೋಪಿ ಹಾಗೂ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ(ಮಂಗಳಸೂತ್ರ ಹೊರತು ಪಡಿಸಿ). ಶೂ ಹಾಕಿಕೊಂಡುಬರುವಂತಿಲ್ಲ, ಸಾಧಾ ಚಪ್ಪಲಿಗಳನ್ನು ಧರಿಸಿರಬೇಕು ಎಂದು ತಿಳಿಸಿದರು. 200 ಮೀಟರ್ ಪ್ರದೇಶ ನಿಷೇಧ: ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ತಪಾಸಣಾ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಬಿಗಿ ಪೊಲೀಸ್ ಬಂದೋಬ್ತಸ್ ವ್ಯವಸ್ಥೆ ಕೈಗೊಳ್ಳಬೇಕು. ಪರೀಕ್ಷೆ ದಿನಗಳಂದು ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದು ಆಯಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರಿಗೆ ವ್ಯವಸ್ಥೆ : ಪರೀಕ್ಷಾ ದಿನದಂದು ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಸಮಯಕ್ಕೆ ಅಭ್ಯರ್ಥಿಗಳು ತಲುಪಲು ಪರೀಕ್ಷಾ ಕೇಂದ್ರಗಳಿಗೆ ಕೇಂದ್ರ ಬಸ್ ನಿಲ್ದಾಣದಿಂದ ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳಿಗೆ ಸೂಚನೆ ನೀಡಿದರು. ವೈದ್ಯಕೀಯ ವ್ಯವಸ್ಥೆ : ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನಿಯೋಜನೆ ಮಾಡಬೇಕು ಹಾಗೂ ಬೇಸಿಗೆ ಕಾಲವಾದ್ದರಿಂದ ತುರ್ತು ಸಂದರ್ಭಕ್ಕೆ ಬೇಕಾದ ಓಆರ್ಎಸ್ ಹಾಗೂ ಇತರೆ ಓಷಧಿಗಳು ಆಂಬುಲೆನ್ಸ್ ವ್ಯವಸ್ಥೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬಂದೋಬಸ್ತ್ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ ಅವರು ಮಾತನಾಡಿ, ಪರೀಕ್ಷೆಗಳು ಪಾರದರ್ಶಕವಾಗಿ ಶಾಂತಯುತವಾಗಿ ನಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಉಪಯೋಗಿಸುವ ಕೊಠಡಿಗಳನ್ನು ಹೊರತುಪಡಿಸಿ ಹೆಚ್ಚುವರಿ ಕೊಠಡಿಗಳಿಗೆ ಬೀಗಹಾಕಬೇಕು ಎಂದು ಸಲಹೆ ನೀಡಿದರು. ಫ್ರಿಸ್ಕಿಂಗ್: ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್ ಮಾತನಾಡಿ, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಫ್ರಿಸ್ಕಿಂಗ್ ಮಾಡಲಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮೊದಲು ಅವರ ತಪಾಸಣೆ ನಡೆಸಬೇಕು ಎಂದರು.
ಪರೀಕ್ಷಾ ಕೇಂದ್ರಗಳು: ಹಾವೇರಿ ನಗರದ ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕರ ಪದವಿ ಪೂರ್ವ ಕಾಲೇಜು, ದೇವಗಿರಿ ಸರ್ಕಾರಿ ಇಂಜನೀಯರ್ ಕಾಲೇಜ ಹಾಗೂ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು. ಕೇಂದ್ರಿಯ ವಿದ್ಯಾಲಯ ಪ್ರಾಂಶುಪಾಲ ಪಿ ಎಸ್ ರಾಜು ಅವರು ಮಾತನಾಡಿ, ಜಿಲ್ಲೆಯಲ್ಲಿ 2,360 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈಗಾಗಲೇ ಪರೀಕ್ಷಾ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಾಚಾರ್ಯರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 