ಜಮೀನು ವಿವಾದದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಜಿಲ್ಲಾಧಿಕಾರಿ ಸಾಂತ್ವನ

ಜಮೀನು ವಿವಾದದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಜಿಲ್ಲಾಧಿಕಾರಿ ಸಾಂತ್ವನ  District Magistrate condoles with family of man who died in land dispute

ಹಾವೇರಿ 18:  ಹಾನಗಲ್ ತಾಲೂಕಿನ ಬ್ಯಾಡಗಿವಾಡಿ ಗ್ರಾಮದಲ್ಲಿ ಇತ್ತೀಚೆಗೆ ಜಮೀನು ಗಡಿ ವಿವಾದದ ಹಿನ್ನೆಲೆಯಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ವ್ಯಕ್ತಿಯ ಕುಟುಂಬವನ್ನು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಭೇಟಿ ಮಾಡಿ ಸಾಂತ್ವನ ಹೇಳಿದರು.  

ಶನಿವಾರ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮೃತರ ಕುಟುಂಬದ ಸದಸ್ಯರು ಹಾಗೂ ಗಾಯಾಳುಗಳೊಂದಿಗೆ ಮಾತುಕತೆ ನಡೆಸಿ, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.  

ಸಮಾಜ ಕಲ್ಯಾಣ ಇಲಾಖೆಯಿಂದ ಮೃತರ ಅವಲಂಬಿತರಿಗೆ ಹಾಗೂ ಸಂತ್ರಸ್ತರಿಗೆ ನಿಯಮಾನುಸಾರ ಪರಿಹಾರಧನ ಮಂಜೂರು ಮಾಡುವ ಆದೇಶ ಪತ್ರಗಳನ್ನು ವಿತರಿಸಿದರು. ಮೃತರ ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಹಾಗೂ ಪಿಂಚಣಿ ಸೌಲಭ್ಯ ಒದಗಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.  

ಪ್ರಕರಣದ ವಿವರ  

ಜುಲೈ 15ರಂದು ಜಮೀನು ಗಡಿ ವಿವಾದದ ಹಿನ್ನೆಲೆಯಲ್ಲಿ ನಡೆದ ಘರ್ಷಣೆಯಲ್ಲಿ ಅಡಿವೆಪ್ಪ ವಾಸಪ್ಪ ಉದ್ದನಕಾಳು, ಉಡಚಪ್ಪ ಬಸವಣ್ಣೆಪ್ಪ ಉದ್ದನಕಾಳು, ಫಕ್ಕೀರ​‍್ಪ ಬಸವಣ್ಣೆಪ್ಪ ಉದ್ದನಕಾಳು ಹಾಗೂ ಶ್ರೀಮತಿ ಫಕ್ಕೀರವ್ವ ಬಸವಣ್ಣೆಪ್ಪ ಉದ್ದನಕಾಳು ಅವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದನೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಘರ್ಷಣೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಡಿವೆಪ್ಪ ವಾಸಪ್ಪ ಉದ್ದನಕಾಳು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಜುಲೈ 15ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪ್ರಶಾಂತ ವರಗಪ್ಪನವರ, ಹಾನಗಲ್ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಪೊಲೀಸ್ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.