ಜನರ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ ಸ್ನೇಹಲ್ ಆರ್‌.

ಜನರ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ ಸ್ನೇಹಲ್ ಆರ್‌. District administration is ready to resolve people's problems: DC Snehal R.

ಲೋಕದರ್ಶನ ವರದಿ 

ಹುಬ್ಬಳ್ಳಿ ಫೆ.16: ಧಾರವಾಡ ಜಿಲ್ಲೆಯಲ್ಲಿ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತ ಪರಿಹಾರ, ಶಿಕ್ಷಣದ ಗುಣಮಟ್ಟ ಹೆಚ್ಚಳ ಹಾಗೂ ಬೇಸಿಗೆ ನೀರಿನ ನಿರ್ವಹಣೆಗೆ ಜಿಲ್ಲಾಡಳಿತ ಸಮಗ್ರ ಕಾರ್ಯ ಯೋಜನೆ ರೂಪಿಸಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಹೇಳಿದರು. 

ಇಂದು ತಾಲೂಕು ಆಡಳಿತಸೌಧದ ಹುಬ್ಬಳ್ಳಿ ತಹಶೀಲ್ದಾರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಜನಸ್ನೇಹಿಯಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರತಿಯೊಂದು ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆಯನ್ನು ನೀಡಲಾಗಿದೆ. ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ದೂರು ಸ್ವೀಕಾರ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ. ಬರುವ ದೂರುಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಜನರಿಂದ ಬಂದ ಮಾಹಿತಿಯ ಆಧಾರದ ಮೇಲೆ ಸ್ಥಳ ಪರೀಶೀಲನೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿರುತ್ತದೆ ಎಂದು ಅವರು ತಿಳಿಸಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಜಿಲ್ಲೆಗೆ ವಿದ್ಯಾ ಕಾಶಿ ಎಂಬ ಹೆಗ್ಗಳಿಕೆ ಇರುವ ಹಿನ್ನೆಲೆಯಲ್ಲಿ ಈ ವರ್ಷ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ರಾ​‍್ಯಂಕ್ ಗಳಿಸಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆ, ಕಾಲೇಜುಗಳಲ್ಲಿ ಹೆಚ್ಚುವರಿ ತರಗತಿಗಳು, ಮಾರ್ಗದರ್ಶನ ಶಿಬಿರಗಳು, ಪ್ರಶ್ನೆಪತ್ರಿಕೆ ಅಭ್ಯಾಸ ಹಾಗೂ ವಿಷಯ ತಜ್ಞರಿಂದ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಕಳೆದ ಸಾಲಿನಲ್ಲಿ ಸಾಧಿಸಿದ ಸಾಧನೆಗಿಂತ ಹೆಚ್ಚಿನ ಸಾಧನೆಯನ್ನು ಮಾಡಲು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲಾಗುತ್ತದೆ. ರಾಜ್ಯ ಮಟ್ಟದಲ್ಲಿ ಉನ್ನತ ಸ್ಥಾನವನ್ನು ಧಾರವಾಡ ಜಿಲ್ಲೆ ಪಡೆದುಕೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಬೇಸಿಗೆ ಕಾಲವನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಚಿತವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗ್ರಾಮ ಪಂಚಾಯತ್, ನಗರಸಭೆ ಹಾಗೂ ನೀರು ಸರಬರಾಜು ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ನೀರಿನ ಮೂಲಗಳನ್ನು ಗುರುತಿಸಲಾಗುತ್ತಿದೆ. ಜನಸಾಮಾನ್ಯರು ಮಾತ್ರವಲ್ಲದೆ ಜಾನುವಾರುಗಳಿಗೆ ಸಹ ಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಕ್ಷಮತೆ ಕುರಿತು ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಕಾರ್ಯ ನಿರ್ವಹಿಸದ ಘಟಕಗಳನ್ನು ದುರಸ್ತಿ ಮಾಡಿ ಮರುಚಾಲನೆ ಮಾಡುವ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು. 

ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಸಮಗ್ರ ಸಮೀಕ್ಷೆ ನಡೆಸಲಾಗಿದೆ. ಈಗಾಗಲೇ ಹಲವೆಡೆ ಗುರುತು ಮಾಡುವ ಕಾರ್ಯ ಪೂರ್ಣಗೊಂಡಿದ್ದು, ಬೇಬಿ ನಾಯಿಗಳ ರಕ್ಷಣೆ, ಲಸಿಕೆ, ಹಾಗೂ ಅವುಗಳನ್ನು ಸೂಕ್ತ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸುವ ಯೋಜನೆ ರೂಪಿಸಲಾಗಿದೆ. ಜಿಲ್ಲಾಡಳಿತವು ಪ್ರತಿ ತಿಂಗಳು ಕನಿಷ್ಠ ಒಂದು ಬಾರಿ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರೀಶೀಲನೆ ನಡೆಸಲಿದೆ. ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಜೊತೆ ನೇರ ಸಭೆ ನಡೆಸಿ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಅವುಗಳನ್ನು ತ್ವರಿತವಾಗಿ ಪರಿಹರಿಸುವಂತೆ ತಹಶೀಲ್ದಾರರಿಗೆ ಸೂಚನೆ ನೀಡಿದರು. ಹುಬ್ಬಳ್ಳಿ ಶಹರ ತಹಶೀಲ್ದಾರ ಮಹೇಶ ಭಗವಂತ ಗಸ್ತೆ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಜೆ.ಬಿ.ಮಜ್ಜಗಿ, ಗ್ರೇಡ್ 2 ತಹಶೀಲ್ದಾರ ಶಿವಾನಂದ ಹೆಬ್ಬಳ್ಳಿ, ಕಂದಾಯ ನೀರೀಕ್ಷಕ ರವಿ ಬೆಣ್ಣೂರ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಇತರರು ಹಾಜರಿದ್ದರು.