ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ  District-level sports meet inaugurated

ಲೋಕದರ್ಶನ ವರದಿ    

ವಿಜಯಪುರ 24:  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ, ಬೆಂಗಳೂರು ಇವರ ಆಶ್ರಯದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ನಗರದ ಡಾ. ಬಿ.ಆರ್‌. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.  

ಕಾರ್ಯಕ್ರಮದಲ್ಲಿ ಮಾತನಾಡಿದ ಜಾವೇದ್ ಜಮಾದಾರ್, ಜಿಲ್ಲೆಯ 13 ತಾಲೂಕುಗಳಲ್ಲಿ ನಡೆದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಹೇಳಿದರು. ಕ್ರೀಡೆಯಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡುವ ಮೂಲಕ ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಸರು ತರಬೇಕು ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.  

ನಾಗರಾಜ ಲಂಬು ಮಾತನಾಡಿ, ಜೀವನದಲ್ಲಿ ಕಲಿಕೆಗೆ ನೀಡುವಷ್ಟೇ ಮಹತ್ವವನ್ನು ಕ್ರೀಡೆಗೂ ನೀಡಬೇಕು. ಸದಾ ಕ್ರಿಯಾಶೀಲರಾಗಿರಲು ವ್ಯಾಯಾಮ, ಯೋಗ ಹಾಗೂ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದರು. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಿಸುವುದರ ಜೊತೆಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.  

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಬೋವಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವುದು ಮುಖ್ಯ ಎಂದು ಹೇಳಿದರು.

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಅನಾವರಣಗೊಳಿಸಲು ಕ್ರೀಡೆ ಉತ್ತಮ ವೇದಿಕೆಯಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ತಮ ಮನೋಭಾವ, ತಾಳ್ಮೆ, ಶಿಸ್ತು ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯ ಎಂದರು.  

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ರವಿಕುಮಾರ, ಹನುಮಂತ ರಾಮಪುರ, ರವಿಕುಮಾರ ವಾಲಿ, ಪ್ರಿಯಾಂಕಾ, ದೈಹಿಕ ಶಿಕ್ಷಣ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.