ಡಾ. ಬಾಬು ಜಗಜೀವನ್ ರಾಮ್ ದೇಶದ ಪ್ರಗತಿಗೆ ಅನನ್ಯ ಕೊಡುಗೆ

ಡಾ. ಬಾಬು ಜಗಜೀವನ್ ರಾಮ್ ದೇಶದ ಪ್ರಗತಿಗೆ ಅನನ್ಯ ಕೊಡುಗೆ Dr. Babu Jagjivan Ram's unique contribution to the country's progress

ಲೋಕದರ್ಶನ ವರದಿ 

ವಿಜಯಪುರ, ಜು. 6: ದೇಶದ ಕೃಷಿ, ರಕ್ಷಣೆ ಹಾಗೂ ಸಾಮಾಜಿಕ ಸಮಾನತೆ ಕ್ಷೇತ್ರಗಳಲ್ಲಿ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಕೊಡುಗೆ ಅನನ್ಯವಾಗಿದ್ದು, ಅವರ ಸೇವೆ ಸದಾ ಸ್ಮರಣೀಯ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿದರು.  

ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಡಾ. ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ 40ನೇ ಪುಣ್ಯಸ್ಮರಣೆ ಅಂಗವಾಗಿ ಮಾಲಾರೆ​‍್ಣ ಹಾಗೂ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.  

ದೇಶದಲ್ಲಿ ಆಹಾರದ ಕೊರತೆ ಇದ್ದ ಸಂದರ್ಭದಲ್ಲಿ ಅವರು ಕೈಗೊಂಡ ಕ್ರಮಗಳು ಹಸಿರು ಕ್ರಾಂತಿಗೆ ಭದ್ರ ಬುನಾದಿ ಹಾಕಿ, ಭಾರತವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯನ್ನಾಗಿ ರೂಪಿಸಿದವು ಎಂದು ಹೇಳಿದರು. ರಕ್ಷಣಾ ಸಚಿವರಾಗಿಯೂ ಸಮರ್ಥ ನಾಯಕತ್ವ ನೀಡಿದ ಅವರು, ದೇಶದ ಮೊದಲ ಕಾರ್ಮಿಕ ಸಚಿವರಾಗಿ ಕಾರ್ಮಿಕರ ಕಲ್ಯಾಣಕ್ಕೂ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.  

ಕಾರ್ಯಕ್ರಮದಲ್ಲಿ ಪಾಲಿಕೆ ಮೇಯರ್ ಎಂ.ಎಸ್‌. ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಋಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಗಣ್ಯರು ಡಾ. ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು.  

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ್ ಪೋತದಾರ್, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.