ಡಾ. ಬಾಬು ಜಗಜೀವನ್ ರಾಂ ಜಯಂತಿ ಆಚರಣೆ

Dr. Babu Jagjivan Ram Jayanti Celebration

ಧಾರವಾಡ ಮಾ.25:  ಭಾರತದ ಧೀಮಂತ ನಾಯಕರಾದ, ಹಸಿರುಕಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ 118 ಜನ್ಮದಿನಾಚರಣೆಯನ್ನು ಹಾಗೂ ಸಂವಿಧಾನ ಶಿಲ್ಪಿ, ಭಾರತರತ್ನ, ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. 

ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದಲ್ಲಿ, ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ ಅವರ ಜಯಂತಿ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತ ಪೂರ್ವಭಾವಿ ಸಭೆ ಜರುಗಿಸಿ, ಮಾತನಾಡಿದರು. 

ಡಾ. ಬಾಬು ಜಗಜೀವನ್ ರಾಂ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್, ಇಬ್ಬರು ಮಹಾತ್ಮರ ಜಯಂತಿಗಳನ್ನು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಾಗೂ ವಿಚಾರ ಸಂಕಿರಣ, ವಿಶೇಷ ಉಪನ್ಯಾಸಗಳನ್ನು ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದರು. 

ಮಹಾತ್ಮರ ಜಯಂತಿಗಳ ಮುನ್ನಾ ದಿನ ಅಂಬೇಡ್ಕರ ಭವನದಲ್ಲಿ ವಿಚಾರ ಸಂಕಿರಣ ಸಂಘಟಿಸಲಾಗುತ್ತದೆ. ಜಯಂತಿ ದಿನದಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ನಗರದ ಪ್ರಮುಖ ವೃತ್ತ, ಬೀದಿಗಳ ಮೂಲಕ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ಆಯೋಜಿಸಲಾಗುತ್ತದೆ. ಜಯಂತಿ ವೇದಿಕೆ ಕಾರ್ಯಕ್ರಮವನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜರುಗಿಸಲಾಗುತ್ತದೆ. ಉಪವಿಭಾಗಾಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿಯು ಗುರುತಿಸುವ ಐದು ಜನ ಸಾಧಕರಿಗೆ ಮತ್ತು ಕಳೆದ ವರ್ಷ ಎಸ್‌.ಎಸ್‌.ಎಲ್‌.ಸಿ., ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳಿಗೆ ವೇದಿಕೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. 

ಸಾರ್ವಜನಿಕರು, ಮುಖಂಡರು ಜಯಂತಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಡಾ.ಬಿಆರ್‌.ಅಂಬೇಡ್ಕರ ಅವರ ಹಾಗೂ ಡಾ.ಬಾಬು ಜಗಜೀವನ್ ರಾಂ ಅವರ ಜೀವನ ಸಾಧನೆಯನ್ನು ಎಲ್ಲರಿಗೂ ತಲುಪಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಜಯಂತಿಗಳನ್ನು ಆಚರಿಸೋಣ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. 

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ವೇದಿಕೆಯಲ್ಲಿದ್ದು, ವ್ಯವಸ್ಥಿತವಾಗಿ ಜಯಂತಿಗಳ ಆಚರಿಸುವ ಕುರಿತು ಮಾತನಾಡಿದರು. 

ದಲಿತ ಸಂಘಟನೆಗಳ ವಿವಿಧ  ಪ್ರಮುಖರ ಜಯಂತಿ ಆಚರಣೆ ಹಾಗೂ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿ, ಮಾತನಾಡಿದರು. 

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. 

ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಮಹಾನಗರಪಾಲಿಕೆ ಸದಸ್ಯರು, ದಲಿತ ಸಂಘಟನೆಗಳ ಪ್ರಮುಖರು, ಸದಸ್ಯರು, ಸಾರ್ವಜನಿಕರು ಭಾಗವಹಿಸಿ ಜಯಂತಿ ಆಚರಣೆ ಕುರಿತು ಅನೇಕ ಸಲಹೆ, ಅಭಿಪ್ರಾಯಗಳನ್ನು ತಿಳಿಸಿದರು.