ಡಾ.ಬಾಬು ಜಗಜೀವನರಾಮ್ ಸಮುದಾಯ ಭವನ ಉದ್ಘಾಟನೆ

ಡಾ.ಬಾಬು ಜಗಜೀವನರಾಮ್ ಸಮುದಾಯ ಭವನ ಉದ್ಘಾಟನೆ Dr. Babu Jagjivanram Community Hall inaugurated

ಲೋಕದರ್ಶನ ವರದಿ 

ಹುಬ್ಬಳ್ಳಿ ಮೇ.26: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಹಾಗೂ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರು ದೇಶ ಕಂಡಂತಹ ಮಹಾನ ವ್ಯಕ್ತಿಗಳಾಗಿದ್ದಾರೆ. ದೇಶದಲ್ಲಿ ಹಸಿರು ಕ್ರಾಂತಿ ಹುಟ್ಟು ಹಾಕಿದ ಮಹಾನ ನಾಯಕ ಡಾ.ಬಾಬು ಜಗಜೀವನರಾಮ್ ಅವರಾಗಿದ್ದಾರೆ ಎಂದು ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಹೇಳಿದರು. ಇಂದು ನ್ಯೂ ಇಂಗ್ಲಿಷ್ ಸ್ಕೂಲ್ ಹತ್ತಿರದ ಪಡದಯ್ಯನ ಹಕ್ಕಲ್ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ.ಬಾಬು ಜಗಜೀವನರಾಮ್ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಡಾ.ಬಾಬು ಜಗಜೀವನರಾಮ್ ಅವರು ಕೃಷಿ ಮಂತ್ರಿಗಳಾಗಿದ್ದಾಗ ದೇಶದಲ್ಲಿ ಆಹಾರ ಸಮಸ್ಯೆ ಉಂಟಾಗಿತ್ತು. ಅಂತಹ ಸಂದರ್ಭದಲ್ಲಿ ಹಸಿರು ಕ್ರಾಂತಿಯನ್ನು ಹುಟ್ಟು ಹಾಕಿದರು. ದೇಶದ ಬಗ್ಗೆ ಚಿಂತನೆ ಮಾಡುತ್ತಿದ್ದರು. ಸಮಾಜದಲ್ಲಿರುವ ಬಡವರ ಏಳ್ಗೆಗಾಗಿ ಶ್ರಮಿಸಿದ್ದಾರೆ. ಸಮಾಜದಲ್ಲಿ ಮೇಲು ಕೀಳು ಎಂಬ ಭಾವನೆ ಇರಬಾರದು. ಜನರು ನೆನೆಯುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.  ರೂ. 9.15 ಕೋಟಿ ವೆಚ್ಚದಲ್ಲಿ ಡಾ.ಬಾಬು ಜಗಜೀವನರಾಮ್ ಸಮುದಾಯ ಭವನವನ್ನು ನಿರ್ಮಾಣ ಮಾಡಲಾಗಿದೆ. ಅಡುಗೆ ಮನೆ, ಇತರೆ ಕಾಮಗಾರಿಗಳು ಉಳಿದಿವೆ. ರೂ.4.50 ಕೋಟಿ ಹಣ ಬಿಡುಗಡೆ ಆಗಬೇಕಿದೆ. ಬೆಂಗಳೂರಿನಲ್ಲಿ ಸಹ ಇದೇ ಮಾದರಿಯ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಸಮುದಾಯ ಭವನವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಸಮುದಾಯದವರು ಕಟ್ಟಡದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.  

ಕರ್ನಾಟಕ ಕೊಳಚೆ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಅಬ್ಬಯ್ಯ ಪ್ರಸಾದ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ಬಾಬು ಜಗಜೀವನರಾಮ್ ಅವರು ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಮಹಾನ ನಾಯಕರಾಗಿದ್ದಾರೆ. ಹಸಿರು ಕ್ರಾಂತಿ ಮೂಲಕ ರಾಷ್ಟ್ರದಲ್ಲಿ ಕ್ರಾಂತಿ ಉಂಟು ಮಾಡಿದ್ದರು. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರನ್ನು ಒಂದೇ ಜಾತಿಗೆ ಸೀಮಿತಗೊಳಿಸಬಾರದು. ಇಬ್ಬರೂ ಜಾತಿ ಮೀರಿ ಬೆಳೆದ ವ್ಯಕ್ತಿತ್ವಗಳಾಗಿದ್ದಾರೆ. ಶಿಕ್ಷಣದಿಂದ ಮಾತ್ರ ಸವಾಂರ್ಗೀಣ ಅಭಿವೃದ್ಧಿ ಸಾಧಿಸಲು ಸಾಧ್ಯ. ನಮ್ಮ ಮೇಲೆ ಆಗುವ ದೌರ್ಜನ್ಯಗಳನ್ನು ಎದುರಿಸಬಹುದು. ಬಸವಣ್ಣನವರು ಸಮಾನತೆ ತರಲು ಮುಂದಾಗಿದ್ದಾರೆ. ಸಮಾಜವನ್ನು ಒಡೆಯುವ ಕೆಲಸಗಳಾಗುತ್ತಿವೆ. ಡಾ.ಬಾಬು ಜಗಜೀವನರಾಮ್ ಸಮುದಾಯ ಭವನವನ್ನು ಅದ್ಭುತವಾಗಿ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಐಎಎಸ್, ಕೆಎಎಸ್ ಕೋಚಿಂಗ್ ಸೆಂಟರ್ ತೆರೆಯಲಾಗುವುದು. ಈಗಾಗಲೇ ಈ ಭಾಗದಲ್ಲಿ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ವ್ಯವಸ್ಥಿತ ರೀತಿಯಲ್ಲಿ ಭವನ ನಿರ್ವಹಣೆ ಆಗಬೇಕು ಎಂದು ಅವರು ಹೇಳಿದರು.