ಬೆಂಗಳೂರು, ಏಪ್ರಿಲ್ 9, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಾವುದೇ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ ಸೂಚಿಸಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ "ಕೊರೋನಾ ವೈರಾಣು ಸೋಂಕು ತಡೆಯಲು ಜಿಲ್ಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು" ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊರೋನಾ ವೈರಾಣು ತಡೆಗಟ್ಟುವ ಕ್ರಮಗಳ ನಡುವೆಯೂ ಆದ್ಯತೆ ಮೇರೆಗೆ ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವುದು ಸಾಮಾನ್ಯವಾಗಿದ್ದು, ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್ ಮೂಲಕ ಅಥವಾ ಇತರೆ ಮೂಲಗಳ ಮುಖೇನ ನೀರು ಸರಬರಾಜಿಗೆ ಕ್ರಮವಹಿಸಬೇಕು ಎಂದು ಹೇಳಿದರು.
ಕೃಷಿ ಚಟುವಟಿಕೆಗಳಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆಯಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಕೊರೋನಾ ವೈರಾಣು ಸೋಂಕು ತಡೆಗಟ್ಟುವ ಹಿನ್ನೆಲೆ, ಲಾಕ್ ಡೌನ್ ಘೋಷಣೆಯಿಂದ ರೈತರು ಬೆಳೆದಿರುವ ಬೆಳೆಗಳ ಸಾಗಾಣಿಕೆಗೆ ಹಾಗೂ ಮಾರಾಟಕ್ಕೆ ಸಮಸ್ಯೆ ಎದುರಾಗಿತ್ತು. ಆದರೆ ಸರ್ಕಾರವು ವಿನಾಯಿತಿ ನೀಡಿದ ಬಳಿಕ ಎಲ್ಲಾ ಸಮಸ್ಯೆಗಳು ಒಂದು ಹಂತದಲ್ಲಿ ಬಗೆಹರಿದಂತಾಗಿದೆ. ದ್ರಾಕ್ಷಿ ಹಾಗೂ ಹೂ ಬೆಳೆಗಾರರ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಹೇಳಿದರು.ಕೊರೋನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಿರುವ ವೈದ್ಯಕೀಯ ಸಿಬ್ಬಂದಿಗಳ ಆರೋಗ್ಯ ತಪಾಸಣೆ ಕಡ್ಡಾಯವಾಗಿ ನಡೆಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು. ವಲಸೆ ಕಾರ್ಮಿಕರಿಗೆ ಆಹಾರ, ನೀರು ಹಾಗೂ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ನೀಡಬೇಕು. ಸರ್ಕಾರದ ನಿರ್ದೇಶನದಂತೆ ಸಮರ್ಪಕವಾಗಿ ಪಡಿತರ ವಿತರಣೆ ಆಗಬೇಕು ಎಂದು ಹೇಳಿದರು. ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ಬೈಲನರಸಾಪುರ ಗ್ರಾಮದ ಇಬ್ಬರು ವ್ಯಕ್ತಿಗಳಲ್ಲಿ ಕೊರೋನಾ ವೈರಾಣು ಸೋಂಕು ದೃಢ ಪಟ್ಟಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆ ಗ್ರಾಮದ ಎಲ್ಲಾ ಕುಟುಂಬಗಳನ್ನು ಹೋಂ ಕ್ವಾರಂಟೀನ್ ನಲ್ಲಿಟ್ಟು, ಮನೆ ಮತ್ತು ಗ್ರಾಮದಿಂದ ಹೊರಗೆ ಹೋಗದಂತೆ ಹಾಗೂ ಗ್ರಾಮಕ್ಕೆ ಯಾರು ಪ್ರವೇಶಿಸದಂತೆ ತಿಳಿಸಲಾಗಿದೆ. ಅಹಿತಕರ ಘಟನೆಗಳ ನಿಯಂತ್ರಣಕ್ಕೆ ರಿಸರ್ವ್ ಪೊಲೀಸ್ ಪಡೆಯ ವಾಹನವು ಗ್ರಾಮದಲ್ಲಿ ಗಸ್ತು ತಿರುಗಲಿದೆ ಎಂದು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.