ಕುಡಿಯುವ ನೀರಿನ ಸಮಸ್ಯೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ

ಬೆಳಗಾವಿ, ಫೆ.29: ಬೇಸಿಗೆ ಆರಂಭಗೊಂಡಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಅಧಿಕಾರಿಗಳು ಈಗಿನಿಂದಲೇ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಕೆ.ಎಲ್.ಅತೀಕ್ ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಫೆ.29) ನಡೆದ ಜಿಲ್ಲೆಯ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲೆಯ 12 ಗ್ರಾಮ ಪಂಚಾಯತಗಳಲ್ಲಿ ಕುಡಿಯುವ ನೀರಿನ ಅಭಾವ ಕಂಡುಬಂದಿದ್ದು, ಮಾರ್ಚವರೆಗೆ ಇನ್ನೂ ಹೆಚ್ಚಿನ ಸಂಖ್ಯೆಯ ಹಳ್ಳಿಗಳಲ್ಲಿ ಸಮಸ್ಯೆ ಉಂಟಾಗಬಹುದು. 

ಆದ್ದರಿಂದ ಪಿ.ಡಿ.ಒ ಗಳು ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಟ್ಯಾಂಕರ್  ಸೌಲಭ್ಯವನ್ನು ಒದಗಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು. 

ಎಲ್ಲಾ ತಾಲೂಕುಗಳಿಗೆ ಕುಡಿಯುವ ನೀರಿನ ಬಗ್ಗೆ ನಿಗಾ ವಹಿಸಿ ಎಲ್ಲಿ ಬೋರವೆಲ್ ಅವಶ್ಯಕತೆ ಇದೆ ಎಂಬುದನ್ನು ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 

ಪ್ರವಾಹದ ಸಂದರ್ಭದಲ್ಲಿ ಜೀವಹಾನಿ, ಬೆಳೆಹಾನಿ, ಮನೆಗಳ ಹಾನಿ ಉಂಟಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮನೆ ಕಟ್ಟಿಸಿಕೋಡವ ಕಾರ್ಯ ಪ್ರಥಮ ಹಂತದಲ್ಲಿ ಮುಗಿದಿದೆ ಆದಷ್ಟೂ ಬೇಗ  ಎರಡನೇ ಹಂತದ ಕಾರ್ಯವನ್ನು  ಕೈಗೊಳ್ಳಬೇಕು ಎಂದು ನಿದರ್ೆಶನ ನೀಡಿದರು. 

ಪ್ರತಿಯೊಂದು ಶಾಲೆಯಲ್ಲಿ ಶೌಚಾಲಯ ನಿರ್ಮಾಣ ಮಾಡಬೇಕು, ಯಾವ ಯಾವ ಶಾಲೆಗಳಲ್ಲಿ ಕಂಪೌಂಡ್ ಇಲ್ಲ ಆದಷ್ಟು ಬೇಗ ಕಂಪೌಂಡ್ ನಿರ್ಮಾಣ ಕಾರ್ಯವನ್ನು ಕೈಗೊಳ್ಳಬೇಕು ಎಂದು ತಿಳಿಸಿದರು. 

ಪ್ರತಿಯೊಂದು ಶಾಲೆಯಲ್ಲಿ ಕಿಚನ್ ಗಾರ್ಡನ್ ನಿರ್ಮಾಣ ಮಾಡಬೇಕು ಅದರಲ್ಲಿ ಹೊಂಗೆ ಹುಣಸೆ, ಲಿಂಬು ಗಿಡಗಳನ್ನು ಬೆಳಸಬೇಕು. ಅದೇ ರೀತಿ ಪ್ರತಿಯೊಂದು ಗ್ರಾಮ ಪಂಚಾಯತ್ ಗಳಲ್ಲಿ ಕುಡಿಯುವ ಶುದ್ಧ ನೀರಿನ ಘಟಕವನ್ನು ಪ್ರಾರಂಭಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಅತೀಕ್ ಹೇಳಿದರು. ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ ಹಾಗೂ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.