ಲೋಕದರ್ಶನ ವರದಿ
ಬೇಸಿಗೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಬಾರದು : ಸಚಿವ ಮಂಕಾಳ ವೈದ್ಯ.
ಕಾರವಾರ 25: ಈ ಬಾರಿಯ ಬೇಸಿಗೆಯಲ್ಲಿ ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನಿರಿನ ಸಮಸ್ಯೆ ತಲೆದೋರದಂತೆ ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಮಡು ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚವ ಮಂಕಾಳ ಎಸ್ ವೈದ್ಯ ಕಟ್ಟುನಿಟ್ಟಿನ ಸೂಚನೆ ನಿಡಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುಂಜಾಗೃತೆ ವಹಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉತ್ತರಕ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಅನೇಕ ಯೋಜನೆಗಳನ್ನು ಕೈಗೊಂಡಿದ್ದು, ಈಗಾಗಲೇ ರೂ.1,000 ಕೋಟಿಗೂ ಅಧಿಕ ವೆಚ್ಚದಲ್ಲಿ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಕಾಮಗಾರಿಗಳು ನಡೆಯುತ್ತಿದ್ದು, ಈಗಾಗಲೇ ಕೆಲವು ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಪೂರೈಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಬಾರಿ ಶೇ.49 ರಷ್ಟು ಹೆಚ್ಚು ಮಳೆಯಾದರೂ ಕೂಡಾ ಕೆಲವು ಪ್ರದೇಶದಲ್ಲಿ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಸಂಭವಿಸಬಹುದು ಎಂಬ ಸೂಚನೆಯಿದ್ದು, ಅದಕ್ಕಾಗಿ ಸೂಕ್ತ ಮುನ್ನೆಚರಿಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದಲ್ಲಿ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು, ಕುಡಿಯುವ ನೀರಿನ ಸಮಸ್ಯೆಗಳ ಕುರಿತಂತೆ ದೂರು ನೀಡಲು ನಗರ ಸ್ಥಳೀಯ ಸಂಸ್ಥೆ, ತಾಲೂಕು ಕಚೇರಿ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಜನರು ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದರು.
ಜಿಲ್ಲೆಯ ಜನರು ಯಾವುದೇ ಕಾರಣಕ್ಕೂ ಹಣ ನೀಡಿ ಕುಡಿಯುವ ನೀರು ಪಡೆಯಬಾರದು. ಸಂಬಂಧಪಟ್ಟ ಅಧಿಕಾರಿಗಳು ನೀರು ಪೂರೈಕೆ ಮಾಡಲಿದ್ದಾರೆ. ಸಾರ್ವಜನಿಕರಿಗೆ ನೀರು ಪೂರೈಕೆ ಮಾಡಲು ಹಣಕಾಸಿನ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಖಾಸಗಿ ವ್ಯಕ್ತಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಪರಿಸ್ಥಿತಿಗೆ ಕಾರಣವಾದರೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯ ಕರಾವಳಿ ಭಾಗದ 5 ತಾಲೂಕುಗಳಲ್ಲಿ ಉಪ್ಪು ನೀರು ಸಿಹಿ ನೀರಿನ ಜೊತೆ ಮಿಶ್ರಣವಾಗುವುದನ್ನು ತಡೆಯಲು ಸಣ್ಣ ಸಣ್ಣ ಹಳ್ಳ ಮತ್ತು ನದಿಗಳಿಗೆ ಕಿಂಡಿ ಆಣೆಕಟ್ಟುಗಳನ್ನು ನಿರ್ಮಿಸಿ ಮಳೆಗಾಲದಲ್ಲಿ ಗೇಟ್ ತೆಗೆಯುವ ಮತ್ತು ಬೇಸಿಗೆಗಾಲದಲ್ಲಿ ಗೇಟ್ ಮುಚ್ಚುವ ಮೂಲಕ ಸಿಹಿ ನೀರಿಗೆ ಉಪ್ಪು ನೀರು ಮಿಶ್ರಣವಾಗದ ರೀತಿಯಲ್ಲಿ ಮತ್ತು ಕುಡಿಯುವ ನೀರು ಸಂಗ್ರಹಣೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದರು.
ನಗರ ಸ್ಥಳೀಯ ಸಂಸ್ಥೆಗಳು ಮತ್ತು ನಗರ ನಿರು ಸರಬರಾಜು ಮಂಡಳಿ ಮೂಲಕ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದ್ದು, ಮುಂದಿನ 2 ವರ್ಷಗಳಲ್ಲಿ ಕುಡಿಯುವ ನೀರಿನ ಸರಬರಾಜುವಿನಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳೂವ ಮೂಲಕ ಸಮಸ್ಯೆಯನ್ನು ತಡೆಗಟ್ಟಿ, ದಿನದ 24 ಗಂಟೆಯು ಕುಡಿಯುವ ನೀರು ಪೂರೈಕೆಗೆ ಯೋಜನೆ ರೂಪಿಸಲಾಗಿದೆ ಎಂದರು.
ಕುಡಿಯುವ ನೀರಿನ ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕಗಳನ್ನು ತಕ್ಷಣದಲ್ಲಿ ನಿಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಶೀಘ್ರವಾಗಿ ಅನುಮತಿಗಳನ್ನು ನಿಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ್ ಸೈಲ್, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ. ಸಿಇಓ ಈಶ್ವರ ಕಾಂದೂ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಹಾಗೂ ಜಿಲ್ಲೆಯ ಎಲ್ಲಾ ಉಪ ವಿಬಾಗಾಧಿಕಾರಿಗಳು, ತಹಸಿಲ್ದಾರ್‌ಗಳು, ತಾ.ಂ. ಕಾರ್ಯ ನಿರ್ವಹಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.