ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು: ನ್ಯಾ.ಸಿದ್ದಲಿಂಗ ಪ್ರಭು

ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು: ನ್ಯಾ.ಸಿದ್ದಲಿಂಗ ಪ್ರಭು Education is the fundamental right of every child: Justice Siddalinga Prabhu

ಲೋಕದರ್ಶನ ವರದಿ  

        ಬಳ್ಳಾರಿ 12:  ಹೆಣ್ಣಾಗಲಿ ಅಥವಾ ಗಂಡಾಗಲಿ, ಪ್ರತಿಯೊಬ್ಬ ಮಗುವಿಗೂ ಮೂಲಭೂತ ಶಿಕ್ಷಣ ಪಡೆಯುವ ಹಕ್ಕಿದೆ. ಇದನ್ನು ಯಾವುದೇ ಕಾರಣಕ್ಕೂ ಯಾರು ಕಸಿದುಕೊಳ್ಳಬಾರದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಸಿದ್ದಲಿಂಗ ಪ್ರಭು ಅವರು ಹೇಳಿದರು. ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಅವರು ಮಾತನಾಡಿದರು. 

ಸಂವಿಧಾನದಡಿ ಪ್ರತಿಯೊಬ್ಬ ಮಗುವಿಗೂ ವಿದ್ಯಾಭ್ಯಾಸ ಪಡೆಯುವ ಮೂಲಭೂತ ಹಕ್ಕನ್ನು ನೀಡಲಾಗಿದೆ. ಬಾಲಕಾರ್ಮಿಕ ಪದ್ಧತಿಯನ್ನು ತಡೆಯಲು ಮತ್ತು ಮಕ್ಕಳಿಗೆ ಶಿಕ್ಷಣ ಒದಗಿಸಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಡಿ ಪ್ರತಿ ಮಗುವಿಗೂ ಕಡ್ಡಾಯವಾಗಿ ಮೂಲಭೂತ ಶಿಕ್ಷಣ ಸಿಗುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಮತ್ತು ಸಮಾಜದ ಕರ್ತವ್ಯವಾಗಿದೆ ಎಂದು ತಿಳಿಸಿದರು. 

ಹಿಂದಿನ ದಿನಗಳಿಗೆ ಹೋಲಿಸಿದರೆ ಪ್ರಸ್ತುತ ದಿನಗಳಲ್ಲಿ ಬಾಲಕಾರ್ಮಿಕ ಪದ್ಧತಿ ಗಣನೀಯವಾಗಿ ಕಡಿಮೆಯಾಗಿದೆ. ಆದಾಗ್ಯೂ, ಇದು ಸಮಾಜದಿಂದ ಸಂಪೂರ್ಣವಾಗಿ ತೊಲಗಿಲ್ಲ. ಇಂದಿಗೂ ಸಮಾಜದ ಕೆಲವು ಮೂಲೆಗಳಲ್ಲಿ, ಕಣ್ಣಿಗೆ ಕಾಣಿಸದಂತೆ ಅಥವಾ ಕಾನೂನಿನ ಕಣ್ಣು ತಪ್ಪಿಸಿ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ. ಅಂತಹ ಜಾಗಗಳನ್ನು ಗುರುತಿಸಿ, ಅಲ್ಲಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಪತ್ತೆ ಹಚ್ಚಿ, ಅವರನ್ನು ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಬೇಕು. ತದನಂತರ ಅವರನ್ನು ಶಿಕ್ಷಣದ ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಮುಖ್ಯ ಉದ್ದೇಶವಾಗಬೇಕು ಎಂದು ಅವರು ಕರೆ ನೀಡಿದರು.