ಬೆಂಗಳೂರು 25: ಬಿಜೆಪಿ ಶಾಸಕ ಮುನಿರತ್ನ ಅವರು ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ವೇಳೆ ಅವರ ತಲೆಗೆ ಮೊಟ್ಟೆ ಹೊಡೆಯಲಾಗಿದೆ.
ಮೊಟ್ಟೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ನಂದಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಘಟನೆಗೆ ಕಾಂಗ್ರೆಸ್ ಮುಖಂಡರಾದ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ ಮುನಿರತ್ನ, ನನ್ನನ್ನು ಕೊಲೆ ಮಾಡಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸುರೇಶ್ ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದು ನನ್ನನ್ನು ಕೊಲ್ಲುವ ಪ್ರಯತ್ನವಾಗಿದೆ. ನನ್ನನ್ನು ಮುಗಿಸಲು ಸುಮಾರು 150 ಜನರನ್ನು ಕರೆಸಿದ್ದಾರೆ. ನನ್ನ ಬೆಂಬಲಿಗರು ಮತ್ತು ಪೊಲೀಸರು ಇಲ್ಲದಿದ್ದರೆ ನನ್ನನ್ನು ಹತ್ಯೆ ಮಾಡುತ್ತಿದ್ದರು. ಡಿಕೆ ಶಿವಕುಮಾರ್, ಡಿಕೆ ಸುರೇಶ್, ಹನುಮಂತರಾಯಪ್ಪ ಸೇರಿದಂತೆ ಕೆಲವರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ.