ಪರಿಸರ ಸಂರಕ್ಷಣೆ: ಮಾಲಿನ್ಯ ನಿಯಂತ್ರಣ ಮಂಡಳಿ ಡಿಜಿಟಲ್ ಅಭಿಯಾನಕ್ಕೆ ಮುಖ್ಯಮಂತ್ರಿ ಮೆಚ್ಚುಗೆ

ಬೆಂಗಳೂರು, ಜೂ 5,ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಮ್ಮಿಕೊಂಡಿರುವ ಡಿಜಿಟಲ್ ಅಭಿಯಾನ 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವುದು ಮಹತ್ವದ ಬೆಳವಣಿಗೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೆಚ್ಚುಗೆ ಸೂಚಿಸಿದ್ದಾರೆ. ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿ ಪರಿಸರ ದಿನಾಚರಣೆಯ ವಿಷಯ “ಜೀವ ವೈವಿಧ್ಯ”. ಜೀವ ವೈವಿಧ್ಯ ಇದ್ದಾಗ ಮಾತ್ರ ಪರಿಸರ ಸಮತೋಲನ ಕಾಪಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. 

ಇತ್ತೀಚೆಗೆ ಕೋವಿಡ್ 19ರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಿಂದಾಗಿ ಪರಿಸರ ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿರುವುದು ಸಮಾಧಾನಕರ ವಿಷಯ. ಮಾಲೀನ್ಯ ಪ್ರಮಾಣ ತಗ್ಗಿಸಲು ಎಲ್ಲರೂ ಕೈ ಜೋಡಿಸಬೇಕು ಎಂದರು.ಸಮಾರಂಭದಲ್ಲಿ ಯಡಿಯೂರಪ್ಪ ಪರಿಸರ ಗೀತೆ, ಯೂಟ್ಯೂಬ್ ಚಾನಲ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳಕೆದಾರ ಸ್ನೇಹಿ ವೆಬ್ ಸೈಟ್ ಗೆ ಚಾಲನೆ ನೀಡಿದರು. ಅರಣ್ಯ ಸಚಿವ ಆನಂದ್ ಸಿಂಗ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ವಿಜಯ್ ಕುಮಾರ್ ಗೋಗಿ, ಸದಸ್ಯ ಕಾರ್ಯದರ್ಶಿ ಶ್ರೀನಿವಾಸುಲು ಮೊದಲಾದವರು ಉಪಸ್ಥಿತರಿದ್ದರು.