ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಅಪೌಷ್ಟಿಕತೆ ತೊಡೆದುಹಾಕಿ: ನ್ಯಾಯಾಧೀಶೆ ಶ್ರೀಶೈಲಜಾ
Eradicate malnutrition by providing nutritious food to children: Judge Srishailaja
ಲೋಕದರ್ಶನ ವರದಿ
ಹಾವೇರಿ, ಸೆ.3 (ಕರ್ನಾಟಕ ವಾರ್ತೆ): ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸಬೇಕು ಹಾಗೂ ಮಕ್ಕಳಿಗೂ ಪೌಷ್ಟಿಕ ಆಹಾರ ನೀಡಬೇಕು. ಇದರಿಂದ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ತೊಡೆದುಹಾಕಲು ಸಾಧ್ಯ ಎಂದು ಹಿರಿಯ ದಿವಾಣಿ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ಶ್ರೀಶೈಲಜಾ ಎಚ್.ವಿ. ಹೇಳಿದರು.
ಇಜಾರಿಲಕಮಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ತಾಲೂಕು ಪಂಚಾಯಿತಿ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪೋಷಣ್ ದಿನಾಚರಣೆ ಹಾಗೂ ರಾಷ್ಟ್ರೀಯ ಪೋಷಣ್ ಸಪ್ತಾಹ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಹಾಗೂ ತಾಯಂದಿರಲ್ಲಿ ಕಂಡುಬರುವ ಅಪೌಷ್ಟಿಕತೆ ನಿವಾರಣೆಗೆ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಎಲ್ಲರಿಗೂ ತಲುಪಬೇಕು. ಸಾಂಪ್ರದಾಯಿಕ ಆಹಾರ ಹಾಗೂ ಸಿರಿಧಾನ್ಯಗಳ ಸೇವನೆಗೆ ಮಕ್ಕಳನ್ನು ಪ್ರೇರೇಪಿಸಬೇಕು. ಇದರಿಂದ ಮುಂದಿನ ಪೀಳಿಗೆಯೂ ಆರೋಗ್ಯಕರ ಜೀವನಶೈಲಿ ಹಾಗೂ ಪಾರಂಪರಿಕ ಆಹಾರ ಪದ್ಧತಿಯನ್ನು ಅನುಸರಿಸಲು ಸಾಧ್ಯವಾಗುತ್ತದೆ ಎಂದರು.
ಸೆ.19ರಂದು ರಾಷ್ಟ್ರೀಯ ಲೋಕ ಅದಾಲತ್ ಹಾಗೂ 3.0 ಮಧ್ಯಸ್ಥಿಕೆ ಅಭಿಯಾನ ನಡೆಯಲಿದೆ. ನ್ಯಾಯಾಲಯದಲ್ಲಿ ತಮ್ಮ ಪ್ರಕರಣಗಳಿದ್ದಲ್ಲಿ ಲೋಕ ಅದಾಲತ್ನ ಸದುಪಯೋಗ ಪಡೆದುಕೊಳ್ಳಬೇಕು. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಕಾಯಂ ಜನತಾ ನ್ಯಾಯಾಲಯದಲ್ಲಿಯೂ ಯಾವುದೇ ಖರ್ಚಿಲ್ಲದೆ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.
ಕಾನೂನು ನೆರವಿನ ಅಗತ್ಯವಿದ್ದಲ್ಲಿ ಹಾವೇರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಟೋಲ್ಫ್ರೀ ಸಂಖ್ಯೆ 15100ಕ್ಕೆ ಸಂಪರ್ಕಿಸಬಹುದು ಎಂದರು. ಕಾನೂನು ನೆರವು ಸಹಾಯಕ ಅಭಿರಕ್ಷಕ ವಕೀಲ ಎನ್.ಎನ್. ಡಿಳ್ಳೆಪ್ಪನವರು ಪೌಷ್ಟಿಕ ಆಹಾರ ಹಾಗೂ ಪೋಕ್ಸೊ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ನೇತ್ರಾವತಿ ಜಿ. ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 