ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ ಪದ್ಧತಿ ನಿರ್ಮೂಲನೆ: ಜನಜಾಗೃತಿ ಸಂಚಾರಿ ವಾಹನಕ್ಕೆ ಚಾಲನೆ

Eradication of child and juvenile labor: Public awareness campaign launched

ಲೋಕದರ್ಶನ ವರದಿ 

ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ ಪದ್ಧತಿ ನಿರ್ಮೂಲನೆ: ಜನಜಾಗೃತಿ ಸಂಚಾರಿ ವಾಹನಕ್ಕೆ ಚಾಲನೆ 

ಬಳ್ಳಾರಿ 21: ಶಿಕ್ಷಣವೇ ಶಕ್ತಿ-ಬಾಲ ದುಡಿಮೆಗೆ ಮುಕ್ತಿ ಎಂಬ ಧ್ಯೇಯದೊಂದಿಗೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಮತ್ತು ತಿದ್ದುಪಡಿ ಕಾಯ್ದೆ 2016ರ ಕುರಿತು ಜಿಲ್ಲೆಯಲ್ಲಿ 7 ದಿನಗಳ ಕಾಲ ಸಂಚರಿಸುವ ಜನಜಾಗೃತಿ ಸಂಚಾರಿ ವಾಹನಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್‌.ಹೊಸಮನೆ ಹಾಗೂ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಶುಕ್ರವಾರ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರ್ಮಿಕ ಇಲಾಖೆ ಇವರ ಸಂಯುಕ್ತಾಶ್ರಯಲ್ಲಿ ಜಿಲ್ಲಾ ಬಾಲ ಕಾರ್ಮಿಕ ಸೊಸೈಟಿ ಕಚೇರಿ ವತಿಯಿಂದ 2024-25 ನೇ ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನದಡಿ ಜಿಲ್ಲೆಯ 05 ತಾಲ್ಲೂಕು ವಿವಿಧ ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರಕಾರ್ಮಿಕರ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸುವ ಧ್ವನಿವರ್ಧಕ ಹೊಂದಿದ ಆಟೋ ಪ್ರಚಾರ ವಾಹನವು ಮಾ.21 ರಿಂದ 27 ರ ವರೆಗೆ ಸಂಚರಿಸಲಿದೆ. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್‌.ಹೊಸಮನೆ ಅವರು ಮಾತನಾಡಿ, ಮಕ್ಕಳನ್ನು ದುಡಿಮೆಗೆ ಕಳುಹಿಸಬಾರದು, ಮಕ್ಕಳಿಂದ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಮಕ್ಕಳಿಗೆ ಬಾಲ್ಯ, ಆರೋಗ್ಯ ಮತ್ತು ಶಿಕ್ಷಣ ನೀಡಬೇಕು ಎಂದು ಹೇಳಿದರು. 

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್‌.ಎನ್ ಅವರು ಮಾತನಾಡಿ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಿಂದ ಸಮಾಜದ ಅಭಿವೃದ್ಧಿಗೆ ನಾಂದಿಯಾಗುತ್ತದೆ. ಬಾಲ ದುಡಿಮೆಗೆ ಮುಕ್ತಿ ನೀಡಲು, ಶಿಕ್ಷಣವೇ ಶಕ್ತಿಯಾಗಿದೆ ಎಂದು ಹೇಳಿದರು. 

14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಮತ್ತು 14 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಹಾಗೂ 2 ವರ್ಷದವರೆಗೆ ಕಾರಾಗೃಹ ಶಿಕ್ಷೆ ಅಥವಾ 20 ಸಾವಿರದಿಂದ 50 ಸಾವಿರದವರೆಗೆ ದಂಡ, ಇಲ್ಲವೇ ಎರಡನ್ನು ವಿಧಿಸಬಹುದಾಗಿದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಎ.ಮೌನೇಶ್ ಅವರು ಹೇಳಿದರು. 

ಇದೇ ವೇಳೆ ಗಣ್ಯರು ಬಾಲ ಕಾರ್ಮಿಕ ಮತ್ತು ಕಿಶೋರಕಾರ್ಮಿಕರ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಕರಪತ್ರ ಬಿಡುಗಡೆಗೊಳಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ತಾಲ್ಲೂಕು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.