ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸತೀಶ್ ನಾಯ್ಕ್‌

ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸತೀಶ್ ನಾಯ್ಕ್‌  Everyone must join hands for environmental conservation: Satish Naik


ಬೆಳಗಾವಿ 28: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಯುವ ಪೀಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು, ಅವುಗಳನ್ನು ಪೋಷಿಸುವ ಮೂಲಕ ಉತ್ತಮ ಪರಿಸರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ನಾಯ್ಕ್‌ ಕರೆ ನೀಡಿದರು.  

ತಾಲೂಕಿನ ಕನಕುಂಬಿ ವಲಯದ ಅಮಟೆ ಕಾರ್ಯಕ್ಷೇತ್ರ ವ್ಯಾಪ್ತಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.  

ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸಾಮಾಜಿಕಮುಖಿ ಚಿಂತನೆಗಳು ಹಾಗೂ ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಅವರು ವಿವರಿಸಿದರು.  

‘ಮರದಿಂದ ಮಳೆ, ಮಳೆಯಿಂದ ಬೆಳೆ’ ಎಂಬ ಸಂದೇಶದೊಂದಿಗೆ ಶಾಲಾ ವಿದ್ಯಾರ್ಥಿಗಳು ವಿವಿಧ ಬಗೆಯ ಸಸಿಗಳನ್ನು ನೆಟ್ಟರು. ನೆಟ್ಟ ಸಸಿಗಳನ್ನು ಉತ್ತಮ ರೀತಿಯಲ್ಲಿ ಪೋಷಿಸಿ ಬೆಳೆಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳಿಗೆ ವಹಿಸಲಾಯಿತು.  

ಶಾಲೆಯ ಪ್ರಾಂಶುಪಾಲರಾದ ಸಿ.ವೈ. ಮರೇಮ್ಮಗೋಳ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಹಕಾರಿಯಾಗುತ್ತಿವೆ. ನಮ್ಮ ಶಾಲೆಯಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ಸಂಗತಿ ಎಂದರು.  

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಪಾರ್ವತಿ, ವಿಮಾ ಅಧಿಕಾರಿ ಧನಂಜಯ, ಒಕ್ಕೂಟದ ಅಧ್ಯಕ್ಷ ಪ್ರಕಾಶ ಗುರವ, ಕೃಷಿ ಮೇಲ್ವಿಚಾರಕ ಮಹಾಂತೇಶ್, ವಲಯ ಮೇಲ್ವಿಚಾರಕ ಸಂಜು, ಗ್ರಾಮ ಸೇವಾ ಪ್ರತಿನಿಧಿ ದಶರಥ, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.