ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಎಸ್‌. ಜಾಹ್ನವಿ

ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಎಸ್‌. ಜಾಹ್ನವಿ  Everyone must join hands to build a drug-free society: S. Jahnavi

ಹೂವಿನಹಡಗಲಿ, ಆ. 08: ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್‌. ಜಾಹ್ನವಿ ಹೇಳಿದರು.  

ಪಟ್ಟಣದ ಜಿಬಿಆರ್ ಕಾಲೇಜಿನ ಹಾನಗಲ್ಲು ಕುಮಾರೇಶ ಸಭಾಂಗಣದಲ್ಲಿ ಗುರುವಾರ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧದ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.  

ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆಗೆ ಯಾರಾದರೂ ಒತ್ತಾಯಿಸುವುದು ಅಥವಾ ಅಂತಹ ಚಟುವಟಿಕೆಗಳು ಕಂಡುಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಸಾರ್ವಜನಿಕರ ರಕ್ಷಣೆಗೆ ಪೊಲೀಸ್ ಇಲಾಖೆ ಸದಾ ಸಿದ್ಧವಿದ್ದು, ತುರ್ತು ಸಂದರ್ಭದಲ್ಲಿ 112 ಸಂಖ್ಯೆಗೆ ಕರೆ ಮಾಡಿದರೆ ತಕ್ಷಣ ಪೊಲೀಸರು ನೆರವಿಗೆ ಧಾವಿಸಲಿದ್ದಾರೆ ಎಂದು ತಿಳಿಸಿದರು.  

ಮಾದಕ ವಸ್ತುಗಳ ದುಷ್ಪರಿಣಾಮಗಳಿಂದ ವಿದ್ಯಾರ್ಥಿಗಳು ದೂರವಿರಬೇಕು. ಯುವಜನರು ಮಾದಕ ವ್ಯಸನಕ್ಕೆ ಒಳಗಾಗದಂತೆ ಪೋಷಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.  

ಶಾಸಕ ಕೃಷ್ಣನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಮಾದಕ ದ್ರವ್ಯಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ನಿರಂತರ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.  

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಸಂತೋಷ ಚವಾಣ್, ಸಿಪಿಐ ಮಲ್ಲಪ್ಪ ಎಸ್‌. ಹೂಗಾರ, ಪಿಎಸ್‌ಐಗಳಾದ ಮಣಿಕಂಠ, ಅಶೋಕ್, ಜಿ.ಕೆ. ಅಬ್ಬಾಸ್, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ. ಮೋಹನ್ ರೆಡ್ಡಿ, ಉಪನ್ಯಾಸಕ ವೈ. ಚಂದ್ರಬಾಬು ಸೇರಿದಂತೆ ಪೊಲೀಸ್ ಸಿಬ್ಬಂದಿ, ಕಾಲೇಜು ಆಡಳಿತ ಮಂಡಳಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.