ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಗದಗದಲ್ಲಿ ಉತ್ತಮ ಮೂಲಸೌಕರ್ಯ: ಬಿ.ಬಿ. ಆಸೂಟಿ

ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಗದಗದಲ್ಲಿ ಉತ್ತಮ ಮೂಲಸೌಕರ್ಯ: ಬಿ.ಬಿ. ಆಸೂಟಿ  Excellent infrastructure in Gadag to encourage sports talent: B.B. Asuti


ಗದಗ, ಆ.29: ಕ್ರೀಡಾ ಕ್ಷೇತ್ರದಲ್ಲಿ ಗದಗ ಜಿಲ್ಲೆ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ್ದು, ಹಲವು ಪ್ರತಿಭಾವಂತ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಆಸೂಟಿ ಹೇಳಿದರು.  

ನಗರದ ಮಹಾತ್ಮ ಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಶನಿವಾರ ಮೇಜರ್ ಧ್ಯಾನಚಂದ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  

ಹಾಕಿ ದಿಗ್ಗಜ ಮೇಜರ್ ಧ್ಯಾನಚಂದ್ ಅವರ ಸಾಧನೆಗಳನ್ನು ಸ್ಮರಿಸಿದ ಆಸೂಟಿ, ಗದಗ-ಬೆಟಗೇರಿ ಅವಳಿ ನಗರಕ್ಕೂ ಹಾಕಿ ಕ್ರೀಡೆಯೊಂದಿಗೆ ಐತಿಹಾಸಿಕ ನಂಟಿದೆ ಎಂದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿರುವ ಬೇಣು ಭಟ್, ರಾಜೀವ್ ಬಾಂಗ್ಳೆ ಹಾಗೂ ಸುನಿಲ್ ಜೋಶಿ ಸೇರಿದಂತೆ ಅನೇಕ ಕ್ರೀಡಾಪಟುಗಳು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ ಎಂದು ಹೇಳಿದರು.  

ಗದಗದಲ್ಲಿ ಅತ್ಯಾಧುನಿಕ ಒಳಾಂಗಣ ಕ್ರೀಡಾಂಗಣ ನಿರ್ಮಾಣಗೊಂಡಿದ್ದು, ಬೆಂಗಳೂರನ್ನು ಹೊರತುಪಡಿಸಿದರೆ ರಾಜ್ಯದಲ್ಲೇ ಎರಡನೇ ಅತಿದೊಡ್ಡ ಒಳಾಂಗಣ ಕ್ರೀಡಾಂಗಣ ಗದಗದಲ್ಲಿರುವುದು ಜಿಲ್ಲೆಯ ಕ್ರೀಡಾಪಟುಗಳಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.  

ಜಿಲ್ಲೆಯಲ್ಲಿ ನಿರ್ಮಿಸಲಾಗುತ್ತಿರುವ ಸುಸಜ್ಜಿತ ಕ್ರೀಡಾಂಗಣಗಳು ಯುವ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಹಾಗೂ ಸ್ಪರ್ಧಾತ್ಮಕ ಅವಕಾಶಗಳನ್ನು ಒದಗಿಸಲಿವೆ. ಇದರಿಂದ ಭವಿಷ್ಯದಲ್ಲಿ ಇನ್ನಷ್ಟು ಪ್ರತಿಭೆಗಳು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊರಹೊಮ್ಮಲು ಸಾಧ್ಯವಾಗಲಿದೆ ಎಂದು ಆಸೂಟಿ ವಿಶ್ವಾಸ ವ್ಯಕ್ತಪಡಿಸಿದರು.