ಅತಿವೃಷ್ಟಿ-ಅನಾವೃಷ್ಟಿ ಸಮಸ್ಯೆ: ತುರ್ತು ಪರಿಹಾರ ಕ್ರಮಕ್ಕೆ ಸಚಿವ ಲಕ್ಷ್ಮಣ ಸವದಿ ಸೂಚನೆ
Excess rainfall and drought issues: Minister Laxman Savadi directs urgent relief measures
ಲೋಕದರ್ಶನ ವರದಿ
ಕಾರವಾರ, ಆ.06: ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ, ರಸ್ತೆ ಹಾನಿ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಎರಡು ದಿನಗಳ ಕಾಲ ಜಿಲ್ಲಾದ್ಯಂತ ಪರೀಶೀಲನೆ ನಡೆಸಿ, ತಕ್ಷಣ ಕೈಗೊಳ್ಳಬೇಕಾದ ತುರ್ತು ಪರಿಹಾರ ಕ್ರಮಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಂಪುಟ ದರ್ಜೆ ಸಚಿವ ಲಕ್ಷ್ಮಣ ಸವದಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಅತಿವೃಷ್ಟಿ-ಬರ ಪರಿಸ್ಥಿತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿನ ಬೆಳೆ ಹಾನಿ ಮತ್ತು ಇತರೆ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಪರಿಹಾರ ಒದಗಿಸುವ ಕಾರ್ಯ ಮಾಡಲಾಗುವುದು. ಅಡಿಕೆ ಬೆಳೆಗಳಿಗೆ ಬಾಧಿಸುತ್ತಿರುವ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗ ನಿಯಂತ್ರಣ ಕುರಿತು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರು ಆರ್ಥಿಕ ನಷ್ಟ ಅನುಭವಿಸಿದ್ದು, ಅವರಿಗೆ ಶೀಘ್ರ ಪರಿಹಾರ ನೀಡುವ ಅಗತ್ಯವಿದೆ. ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಯೋಜನೆಗಳ ಮೂಲಕ ಮೂರು ಹಂತಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಶಾಸಕರನ್ನು ಒಳಗೊಂಡಂತೆ ಪಕ್ಷಾತೀತವಾಗಿ ಪ್ರತಿ ಕ್ಷೇತ್ರದ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಅಧಿಕಾರಿಗಳೊಂದಿಗೆ ಸ್ಥಳ ಪರೀಶೀಲನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಿ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆಎಸ್ಆರ್ಟಿಸಿ ಅಧ್ಯಕ್ಷ ಹಾಗೂ ಕಾರವಾರ ಶಾಸಕ ಸತೀಶ್ ಸೈಲ್ ಮಾತನಾಡಿ, ಮಳೆಯಿಂದ ಗ್ರಾಮೀಣ ಭಾಗದ ಹಲವು ರಸ್ತೆಗಳು ಹಾನಿಗೊಳಗಾಗಿದ್ದು, ಅವುಗಳ ದುರಸ್ತಿ ಕಾರ್ಯ ತ್ವರಿತವಾಗಿ ಕೈಗೊಳ್ಳಬೇಕು. ಕೈಗಾ ರಸ್ತೆ ಹೆಚ್ಚಿನ ಪ್ರಮಾಣದಲ್ಲಿ ಹಾಳಾಗಿದ್ದು, ತಕ್ಷಣ ದುರಸ್ತಿ ಮಾಡಬೇಕೆಂದು ಒತ್ತಾಯಿಸಿದರು.
ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ಟಿ. ನಾಯ್ಕ ಮಾತನಾಡಿ, ಶಿರಸಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಗ್ರಾಮೀಣ ರಸ್ತೆಗಳು ಹಾಳಾಗಿವೆ. ಅವೈಜ್ಞಾನಿಕ ಕಾಮಗಾರಿಗಳಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು, ಅಡಿಕೆ ಕೊಳೆ ರೋಗ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಸೂಕ್ತ ಓಷಧಿ ಕಂಡುಹಿಡಿದು ಪರಿಹಾರ ಒದಗಿಸಬೇಕು. ಮನೆ ಹಾನಿಗೊಳಗಾದ ಸಂತ್ರಸ್ತರಿಗೆ ಗರಿಷ್ಠ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಮಾತನಾಡಿ, ಹಾರವಾಡದ ಕಡಲ ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಯಲ್ಲಾಪುರ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್, ಕುಮಟಾ ಶಾಸಕ ದಿನಕರ ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದೀಲೀಪ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 