ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಜಿಲ್ಲೆಯ ತಾಲೂಕುಗಳನ್ನು ಕೈಬಿಟ್ಟಿರುವುದು ಅನ್ಯಾಯ : ಸುಭಾಷ ಪಾಟೀಲ

  ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ  ಜಿಲ್ಲೆಯ ತಾಲೂಕುಗಳನ್ನು ಕೈಬಿಟ್ಟಿರುವುದು  ಅನ್ಯಾಯ : ಸುಭಾಷ ಪಾಟೀಲ Excluding the district's taluks from the list of drought-hit taluks is unjust: Subhash Patil

ಲೋಕದರ್ಶನ ವರದಿ 

ಬೆಳಗಾವಿ  28.  ಪ್ರಸಕ್ತ ವರ್ಷ ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿದೆ. ಸಕಾಲದಲ್ಲಿ ಮಳೆಯಾಗದ ಕಾರಣ ರೈತರು ಬಿತ್ತನೆ ಮಾಡಿದ ಬೆಳೆಗಳು ಒಣಗಿ ನಾಶವಾಗುತ್ತಿವೆ. ರೈತರು ಬೀಜ, ರಸಗೊಬ್ಬರ, ಓಷಧಿ, ಕಳೆ ತೆಗೆಯುವುದು ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಈಗಾಗಲೇ ಕೈ ಸುಟ್ಟುಕೊಂಡಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಬೆಳಗಾವಿ ಜಿಲ್ಲೆಯ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೃಷಿಯನ್ನೇ ನಂಬಿಕೊಂಡಿರುವ ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರು ಜೀವನೋಪಾಯಕ್ಕಾಗಿ ಬೇರೆ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ರೈತರು ತೀವ್ರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರ ಹಿತವನ್ನು ಕಾಪಾಡಿ ಅಗತ್ಯ ಪರಿಹಾರ ದೊರಕಿಸಿಕೊಡುವುದು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿ. ಆದರೆ ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ.ಅಧಿಕಾರದಲ್ಲಿದ್ದುಕೊಂಡು  ರೈತರಿಗೆ ನ್ಯಾಯ ಕೊಡಿಸಲು ಸಾಧ್ಯವಾಗದಿದ್ದರೆ, ಆ ಅಧಿಕಾರದಿಂದ ಜನರಿಗೆ ಏನು ಪ್ರಯೋಜನ? ಎಂಬ ಪ್ರಶ್ನೆಯನ್ನು ಇಂದು ರೈತರು ಕೇಳುವಂತಾಗಿದೆ.ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಬೆಳಗಾವಿ ಜಿಲ್ಲೆಯ ತಾಲೂಕುಗಳ ವಾಸ್ತವ ಪರಿಸ್ಥಿತಿಯನ್ನು ಮರುಪರೀಶೀಲಿಸಬೇಕು. ಜಿಲ್ಲೆಯ ತಾಲೂಕುಗಳನ್ನು ತಕ್ಷಣವೇ ಬರಪೀಡಿತ ತಾಲೂಕು ಎಂದು ಘೋಷಿಸಿ,  

ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆ, ಜಾನುವಾರುಗಳಿಗೆ ಮೇವು ಹಾಗೂ ಅಗತ್ಯವಿರುವ ಕಡೆ ಗೋಶಾಲೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು.ರಾಜ್ಯ ಸರ್ಕಾರ ಕೇವಲ  ಬರಪೀಡಿತ ತಾಲೂಕು ಎಂದು ಘೋಷಿಸಿದರೆ ಸಾಲದು. ಬರದಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ಬದುಕು ಕಟ್ಟಿಕೊಳ್ಳಲು ಸರ್ಕಾರ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ?50,000 ಬೆಳೆ ನಷ್ಟ ಪರಿಹಾರ ನೀಡಬೇಕು.ಅದೇ ರೀತಿ, ಬರ ಹಾಗೂ ಬೆಳೆ ನಷ್ಟದಿಂದ ರೈತರು ಸಾಲದ ಸುಳಿಯಲ್ಲಿ ಸಿಲುಕಿರುವುದರಿಂದ ಪ್ರತಿ ರೈತನ ?2 ಲಕ್ಷದವರೆಗಿನ ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು.

ನೆರೆಯ ಮಹಾರಾಷ್ಟ್ರದಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಸರ್ಕಾರ ಪರಿಹಾರ ಹಾಗೂ ಸಾಲಮನ್ನಾದಂತಹ ಮಹತ್ವದ ಕ್ರಮಗಳನ್ನು ಕೈಗೊಂಡಿರುವಾಗ, ಕರ್ನಾಟಕದ ರೈತರಿಗೂ ಅದೇ ರೀತಿಯ ಆರ್ಥಿಕ ರಕ್ಷಣೆ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಬರದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಕೇವಲ ಭರವಸೆ ನೀಡದೆ, ?50,000 ಪ್ರತಿ ಹೆಕ್ಟೇರ್ ಪರಿಹಾರ ಮತ್ತು ?2 ಲಕ್ಷದವರೆಗೆ ಕೃಷಿ ಸಾಲಮನ್ನಾ ಘೋಷಿಸುವ ಮೂಲಕ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು.ಜಿಲ್ಲೆಯ ತಾಲೂಕುಗಳನ್ನು  ಬರಪೀಡಿತ ತಾಲೂಕು ಎಂದು ಘೋಷಿಸದಿದ್ದರೆ, ಜಿಲ್ಲೆಯ ರೈತರ ಹಿತಕ್ಕಾಗಿ ರೈತರೊಂದಿಗೆ ಸೇರಿ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.