ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಜಿ. ಕೋಟಿ ಅವರಿಗೆ ಬೀಳ್ಕೊಡುಗೆ

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಜಿ. ಕೋಟಿ ಅವರಿಗೆ ಬೀಳ್ಕೊಡುಗೆ Farewell to Block Education Officer S.G. Koti

ಬ್ಯಾಡಗಿ 2: ಪಟ್ಟಣದ ಶ್ರೀ ಸಿದ್ದೇಶ್ವರ ಸಭಾಭವನದಲ್ಲಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಜಿ. ಕೋಟಿ ಅವರಿಗೆ ಬೀಳ್ಕೊಡುಗೆ ಹಾಗೂ ‘ವ್ಯಾಪಾರ ರತ್ನ’ ಪ್ರಶಸ್ತಿಗೆ ಭಾಜನರಾಗಿರುವ ಮಾಜಿ ಶಾಸಕ ಸುರೇಶಗೌಡ ಪಾಟೀಲ ಅವರಿಗೆ ಶನಿವಾರ ಅದ್ದೂರಿಯಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಜಿ. ಕೋಟಿ, ಕಳೆದ 35 ವರ್ಷಗಳಿಂದ ಸರ್ಕಾರಿ ಸೇವೆಯಲ್ಲಿ ವಿವಿಧೆಡೆ ಕಾರ್ಯನಿರ್ವಹಿಸಿದ್ದು, ಬ್ಯಾಡಗಿ ತಾಲ್ಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿರುವುದು ತಮ್ಮ ಜೀವನದ ಸೌಭಾಗ್ಯ ಎಂದು ಹೇಳಿದರು. ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದದ್ದು. ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುತ್ತಿರುವುದು ಸಂತಸ ತಂದಿದೆ. ತಮ್ಮ ಮಾರ್ಗದರ್ಶನದಲ್ಲಿ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದರು.

ಬ್ಯಾಡಗಿ ತಾಲ್ಲೂಕಿನಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಶಿಕ್ಷಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ನೀಡಿದ ಸಹಕಾರವನ್ನು ಜೀವನಪರ್ಯಂತ ಮರೆಯುವುದಿಲ್ಲ ಎಂದು ಅವರು ಕೃತಜ್ಞತೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಶಾಲೆಯಲ್ಲಿ ಕಲಿತ ಮೌಲ್ಯಗಳು ಮತ್ತು ಶಿಕ್ಷಕರು ಬೋಧಿಸಿದ ಪಾಠಗಳನ್ನು ಎಂದಿಗೂ ಮರೆಯಬಾರದು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಫ್‌. ಹುಲ್ಲಾಳ, ಆಶ್ರಯ ಸಮಿತಿಯ ಅಧ್ಯಕ್ಷ ಅಬ್ದುಲ್ ಮುನಾಫ್ ಯಳಿಗಾರ, ಮಾಲತೇಶ ಚಳಗೇರಿ, ಜಿ.ಟಿ. ಚತ್ರದ, ಬೂದಿಹಾಳ, ಎ.ಟಿ. ಪೀಠದ ಸೇರಿದಂತೆ ಹಲವರು ಉಪಸ್ಥಿತರಿದ್ದರು.