ನೀರಾವರಿ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ನೀರಾವರಿ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ Farmers protest demanding the release of water into irrigation canals

 ಅಥಣಿ 18: ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದರೂ ಕರಿ ಮಸೂತಿ ಹಾಗೂ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಗಳ ಕಾಲುವೆಗಳಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಿರುವ ನೀರಾವರಿ ಇಲಾಖೆ ಅಧಿಕಾರಿಗಳ ಕ್ರಮವನ್ನು ಖಂಡಿಸಿ ನೂರಾರು ರೈತರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.  

ಮಾಜಿ ಸಚಿವ ಶ್ರೀಮಂತ ಪಾಟೀಲ ಹಾಗೂ ಮಾಜಿ ಶಾಸಕ ಮಹೇಶ ಕುಮಠಳ್ಳಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶ್ರೀಮಂತ ಪಾಟೀಲ, "ಕೃಷ್ಣಾ ನದಿಯಲ್ಲಿ ಸಾಕಷ್ಟು ಪ್ರಮಾಣದ ಒಳಹರಿವು ಇದ್ದರೂ ಕಾಲುವೆಗಳಿಗೆ ನೀರು ಹರಿಸದಿರುವುದು ರೈತರ ಮೂಲಭೂತ ಹಕ್ಕು ಕಸಿದಂತಾಗಿದೆ. ರೈತರ ಹೋರಾಟದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಕಾಲುವೆಗಳಿಗೆ ನೀರು ಹರಿಸುವ ನಿರ್ಧಾರ ಕೈಗೊಂಡಿದ್ದರೂ, ಮತ್ತೆ ಸ್ಥಗಿತಗೊಳಿಸಿದರೆ ರೈತರೊಂದಿಗೆ ಜಾಕ್ವೆಲ್ಗೆ ತೆರಳಿ ನೀರು ಹರಿಸಲು ಮುಂದಾಗುತ್ತೇವೆ" ಎಂದು ಎಚ್ಚರಿಸಿದರು.  

ಮಾಜಿ ಶಾಸಕ ಮಹೇಶ ಕುಮಠಳ್ಳಿ ಮಾತನಾಡಿ, "ಅಮಾಜೇಶ್ವರ ಏತ ನೀರಾವರಿ ಯೋಜನೆಯ ದಿಕ್ಕನ್ನು ಬದಲಿಸಿ ರೈತರಿಗೆ ಅನ್ಯಾಯ ಮಾಡಲಾಗಿದೆ. ನಿಗದಿತ ಅವಧಿಯವರೆಗೆ ಕಾಲುವೆಗಳಿಗೆ ನೀರು ಹರಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಿ ಸರ್ಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕಲಾಗುವುದು" ಎಂದು ಹೇಳಿದರು.  

ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್‌.ಎ. ಮುದುಕಣ್ಣವರ ಮಾತನಾಡಿ, "ಅಥಣಿ ಕ್ಷೇತ್ರದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ರೈತರ ಸಂಕಷ್ಟದ ಸಮಯದಲ್ಲಿ ಸ್ಥಳೀಯ ಶಾಸಕರು ಕ್ಷೇತ್ರದಲ್ಲಿ ಕಾಣಿಸಿಕೊಳ್ಳದೆ ಕೇವಲ ಭರವಸೆ ನೀಡುತ್ತಿದ್ದಾರೆ" ಎಂದು ಆರೋಪಿಸಿದರು.  

ಬಿಜೆಪಿ ಮುಖಂಡ ಸತ್ಯಪ್ಪ ಭಾಗಣ್ಣವರ ಮಾತನಾಡಿ, "ರೈತರಿಗೆ ಅವಮಾನವಾಗಿದೆ ಎಂದು ಹೇಳುವ ಶಾಸಕರು, ಇಂದು ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವಾಗ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು" ಎಂದು ಹೇಳಿದರು.  

ಪ್ರತಿಭಟನೆಯಲ್ಲಿ ಕಾಗವಾಡ ಮಂಡಳ ಅಧ್ಯಕ್ಷ ಅರುಣ ಗಣೇಶವಾಡಿ, ನಿಂಗಪ್ಪ ನಂದೇಶ್ವರ, ಗುರುಪ್ಪ ಮಗದುಮ್ ಸೇರಿದಂತೆ ಹಲವು ಮುಖಂಡರು ಮಾತನಾಡಿದರು. ಅಶೋಕ ಯಲಡಗಿ, ರವಿ ಪೂಜಾರಿ, ಸಂತೋಷ ಕಕಮರಿ, ಮಲ್ಲಿಕಾರ್ಜುನ ಅಂದಾಣಿ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.  

ಇದಕ್ಕೂ ಮೊದಲು ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಸೇರಿದ ರೈತರು ದ್ವಿಚಕ್ರ ವಾಹನ ರ್ಯಾಲಿ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  

ರೈತರ ಒತ್ತಾಯದ ಮೇರೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ನೀರಾವರಿ ಇಲಾಖೆ ಅಧಿಕಾರಿ ಪ್ರವೀಣ ಹುಣಸಿಕಟ್ಟಿ ಅವರು, ಕಡಿಮೆ ಮಳೆಯ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದ ಮೇರೆಗೆ ಕಾಲುವೆಗಳಿಗೆ ನೀರು ಹರಿಸುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.  ಪ್ರತಿಭಟನೆಯ ಕೊನೆಯಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ಹಾಗೂ ಮಾಜಿ ಶಾಸಕ ಮಹೇಶ ಕುಮಠಳ್ಳಿ ಅವರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.