ನವದೆಹಲಿ, ಫೆ 5 : ದೇಶಾದ್ಯಂತ ಜೈಲುಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ವಿಸ್ತೃತ ವಿವರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಸೂಚಿಸಿದೆ.
ದೇಶದಲ್ಲಿ ಅಗತ್ಯಕ್ಕಿಂತ ಹೆಚ್ಚು ಕೈದಿಗಳಿರುವ ಜೈಲುಗಳು ಹಾಗೂ ಜೈಲು ಸಿಬ್ಬಂದಿಯ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ವಿಸ್ತೃತ ವಿವರ ಬಯಸುತ್ತಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ ತಿಳಿಸಿದೆ.
ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಹೆಚ್ಚಳಕ್ಕೆ ನ್ಯಾಯಾಲಯಗಳ ವಿಳಂಬ ಪ್ರಕ್ರಿಯೆಗಳೇ ಕಾರಣ ಎಂಬುದನ್ನು ಒಪ್ಪಿಕೊಂಡ ನ್ಯಾಯಪೀಠ, ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.
ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನ್ಯಾಯಪೀಠ ಭರವಸೆ ನೀಡಿತು.