ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ತಂಡಗಳ ರಚನೆ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಬೆಂಗಳೂರು, ಏಪ್ರಿಲ್ 9, ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಹಲವು ತಂಡಗಳನ್ನು ರಚಿಸಲಾಗಿದ್ದು, ಸೋಂಕು ಹರಡದಂತೆ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ನಡೆದ "ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ"ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಐಸೋಲೇಷನ್ ಕೇಂದ್ರ, ಕ್ವಾರಂಟೀನ್ ನಲ್ಲಿರುವವರ ನಿಗಾ, ಫೀವರ್ ಕ್ಲಿನಿಕ್, ಕೋವಿಡ್-19 ಕಂಟ್ರೋಲ್ ರೂಂ, ಚೆಕ್ ಪೋಸ್ಟ್, ಆಹಾರ ಧಾನ್ಯ ಸರಬರಾಜು, ಬ್ಯಾಂಕ್ ಸೇವೆ, ವೈದ್ಯಕೀಯ ಪರಿಕರಗಳ ಲಭ್ಯತೆ, ಮಾಹಿತಿ, ಸಂವಹನ, ಶಿಕ್ಷಣ ಕಾರ್ಯಕ್ರಮ ಸೇರಿದಂತೆ ಇನ್ನಿತರ ಸೌಲಭ್ಯಗಳ ಮೇಲ್ವಿಚಾರಣೆ, ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ಸೂಕ್ತ ಕ್ರಮಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ಹಲವು ತಂಡಗಳನ್ನು ರಚಿಸಲಾಗಿದ್ದು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಹೇಳಿದರು.
ವಿವಿಧ ತಂಡಗಳಿಗೆ ನೇಮಿಸಲಾದ ಅಧಿಕಾರಿಗಳು ತಮಗೆ ವಹಿಸಲಾದ ಕೆಲಸಗಳನ್ನು ತುರ್ತಾಗಿ ನಿರ್ವಹಿಸಬೇಕು. ಸಮಸ್ಯೆಗಳು ಕಂಡುಬಂದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ತಂಡಗಳ ಸಭೆ ಕರೆದು ಸಲಹೆ ನೀಡಬೇಕು. ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಅಧಿಕಾರಿಗಳು ಸಮನ್ವಯತೆ, ಸಹಕಾರದಿಂದ ಕಾರ್ಯ ನಿರ್ವಹಿಸಬೇಕು. ಅಲ್ಲದೆ ಜಿಲ್ಲೆಯಲ್ಲಿ ಕೊರೋನಾ ವೈರಾಣು ಸೋಂಕು ಸಂಪೂರ್ಣ ನಿಯಂತ್ರಣ ಹಾಗೂ ನಿರ್ಮೂಲನೆ ಆಗುವವರೆಗೂ ಎಲ್ಲಾ ತಂಡಗಳು ಅಸ್ತಿತ್ವದಲ್ಲಿದ್ದು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ.  ಜಗದೀಶ್.ಕೆ.ನಾಯಕ್, ಉಪ ಕಾರ್ಯದರ್ಶಿ ಕರಿಯಪ್ಪ, ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ವಿನುತ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.