ಮುಖ್ಯಮಂತ್ರಿಗಳಿಂದ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ

ಗಡಿ ಕನ್ನಡಿಗರ ಸಮಾವೇಶ -ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ 

ವಿಜಯಪುರ, ಸೆಪ್ಟೆಂಬರ್ 27: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ, ಜತ್ತ ತಾಲ್ಲೂಕಿನ ಗುಡ್ಡಾಪುರ ಶ್ರೀ ದಾನಮ್ಮ ದೇವಿ ಸುಕ್ಷೇತ್ರದಲ್ಲಿ ಸೆಪ್ಟೆಂಬರ್ 30 ರಂದು  ಕರ್ನಾಟಕ ಸಂಭ್ರಮ-50'ರ ಆಚರಣೆಯ ಜೊತೆಯಲ್ಲಿ ಶ್ರೀಮತಿ ಡಾ.ಜಯದೇವಿ ತಾಯಿ ಲಿಗಾಡೆ" "ನಾಡೋಜ ಡಾ.ಕಯ್ಯಾರ ಕಿಂಞ್ಞಣ್ಣ ರೈ ಮತ್ತು "ಡಾ. ಚನ್ನಬಸವ ಪಟ್ಟದ್ದೇವರು ಇವರ ಹೆಸರಿನಲ್ಲಿ ಗಡಿ ಪ್ರಾಧಿಕಾರದಿಂದ ನೀಡುತ್ತಿರುವ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಾಗೂ ಹೊರನಾಡ ಗಡಿ ಕನ್ನಡಿಗರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದರು. 

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗೂರು ರಾಮಚಂದ್ರ​‍್ಪ ಅವರ ಸಮಿತಿಯು 2023-24ನೇ ಸಾಲಿಗೆ ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರು ಗಡಿನಾಡಿನ ಚೇತನ ಪ್ರಶಸ್ತಿಗೆ ಕಾಸರಗೋಡಿನ ರಾಧಾಕೃಷ್ಣ ಕೆ. ಉಳಿಯತ್ತಡ, ಡಾ. ಜಯದೇವಿ ತಾಯಿ ಲಿಗಾಡೆ ಗಡಿನಾಡ ಚೇತನ ಪ್ರಶಸ್ತಿಗೆ ಬೀದರದ ಪಂಚಾಕ್ಷರಿ ಪುಣ್ಯ ಶೆಟ್ಟಿ,  ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ ಪ್ರಶಸ್ತಿಗೆ ಬೆಳಗಾವಿಯ ಬಿ.ಎಸ್‌. ಗವಿಮಠ ಹಾಗೂ 2024-25ನೇ ಸಾಲಿನ ಡಾ. ಚನ್ನಬಸವ ಪಟ್ಟದ್ದೇವರು ಗಡಿನಾಡ ಚೇತನ ಪ್ರಶಸ್ತಿಗೆ ಗುಜರಾತಿನ ಅಹ್ಮದಾಬಾದ್‌ನ ಕರ್ನಾಟಕ ಸಂಘ, ಜಯದೇವಿ ತಾಯಿ ಲಿಗಾಡೆ ಗಡಿನಾಡಿನ ಚೇತನ ಪ್ರಶಸ್ತಿಗೆ ಮಹಾರಾಷ್ಟ್ರ ರಾಜ್ಯದ ಸಂಖದ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಉಮದಿಯ ಸರ್ವೋದಯ ಶಿಕ್ಷಣ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದ್ದು, ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ ಪ್ರಶಸ್ತಿಗೆ ಕೇರಳ ರಾಜ್ಯದ ಕಾಸರಗೋಡಿನ ಪೆರಡಾಲ ನೀರ್ಚಾಲು, ಕುಂಬಳೆ (ದಾರಿ) ಮಹಾಜನ ವಿದ್ಯಾಭಿವರ್ಧಕ ಸಂಘ ಆಯ್ಕೆ ಮಾಡಲಾಗಿದ್ದು, ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಹಾಗೂ ಮಹಾರಾಷ್ಟ್ರ ರಾಜ್ಯದ ಕನ್ನಡ ಶಾಲೆಗಳಿಗೆ ಕನ್ನಡ ಭಾಷೆಯ 'ನಲಿ-ಕಲಿ' ಕಲಿಕಾ ಸಾಮಗ್ರಿಗಳು ವಿತರಣೆ ಮಾಡಲಿದ್ದಾರೆ. ಪ್ರಶಸ್ತಿಯು ಹಲ್ಮಿಡಿ ಶಾಸನದ ಮಾದರಿಯ ಸ್ಮರಣಿಕೆ, ಪ್ರಮಾಣ ಪತ್ರ ಹಾಗೂ ಪ್ರಾಧಿಕಾರದಿಂದ ಒಂದು ಲಕ್ಷ ರೂ. ನಗದು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು.ಸಮಾರಂಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ "ಲಾಂಛನ" ವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಬಿಡುಗಡೆ ಮಾಡಲಿದ್ದಾರೆ. ರಾಜ್ಯ ಬೃಹತ್ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ದಿ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಗಡಿ ಪ್ರಾಧಿಕಾರದ ಸಾಕ್ಷ್ಯ ಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ. ಪ್ರಶಸ್ತಿ ಪುರಸ್ಕೃತರ ಪರಿಚಯಾತ್ಮಕ ಕೈಪಿಡಿಯನ್ನು ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯದ ಕಾರ್ಮಿಕ ಸಚಿವರಾದ ಸಾಂಗ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ ಖಾಡೆ ಸೇರಿದಂತೆ ಸಾಂಗ್ಲಿ ಸೋಲಾಪುರ ಜಿಲ್ಲೆಯ ಲೋಕಸಭಾ ಸದಸ್ಯರು, ಚಿಕ್ಕೋಡಿ ಹಾಗೂ ವಿಜಯಪುರದ ಸಂಸದರು, ಮಹಾರಾಷ್ಟ್ರದ ಶಾಸಕರು, ಕರ್ನಾಟಕ ಸರ್ಕಾರದ ವಿವಿಧ ಸಚಿವರುಗಳು ಹಾಗೂ ಶಾಸಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.  

ಸಮಾರಂಭದಲ್ಲಿ ಸಂಗೀತ ನೃತ್ಯ ಅಕಾಡೆಮಿ ಹಾಗೂ ವಿವಿಧ ಅಕಾಡೆಮಿಗಳ ಸಹಯೋಗದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಖ್ಯಾತ ಗಾಯಕಿ ಸಂಗೀತಾ ಕಟ್ಟಿ ಹಾಗೂ ವಿವಿಧ ಜಾನಪದ ನೃತ್ಯ ಮುಂತಾದ ಎಲ್ಲಾ ಪ್ರಕಾರಗಳ ಕಲಾವಿದರು ನಾಡಿನ ಕಲೆಯ ಕುರಿತು ಹೊರನಾಡ ಕನ್ನಡಿಗರನ್ನು ರಂಜಿಸಲಿದ್ದಾರೆ. ಅಂದು ಸಂಜೆ 7-00 ಗಂಟೆಗೆ ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.  

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಗಡಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ಗಡಿ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ಎಮ್‌.ಎಸ್‌. ಮದಭಾವಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಸಿಂಪೀರ್ ವಾಲಿಕಾರ ಉಪಸ್ಥಿತರಿದ್ದರು.