ಆರೋಗ್ಯ ಇಲಾಖೆ ನೌಕರರ ಸಹಕಾರಿ ಸಂಘಕ್ಕೆ ಸುವರ್ಣ ಸಂಭ್ರಮ

ಆರೋಗ್ಯ ಇಲಾಖೆ ನೌಕರರ ಸಹಕಾರಿ ಸಂಘಕ್ಕೆ ಸುವರ್ಣ ಸಂಭ್ರಮ  Golden Jubilee Celebration of the Health Department Employees' Cooperative Society

ಲೋಕದರ್ಶನ ವರದಿ 

 ವಿಜಯಪುರ 22: ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಆರೋಗ್ಯ ಇಲಾಖೆಯ ನೌಕರರ ಸಹಕಾರಿ ಪತ್ತಿನ ಸಂಘವು 50 ವರ್ಷಗಳ ಸೇವೆ ಹಾಗೂ ಸಾಧನೆಯನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಿತು.  

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ, ಸಂಘವು ಐದು ದಶಕಗಳಿಂದ ಬೆಳೆದು ಬಂದಿರುವುದು ಸಂತಸದ ಸಂಗತಿ. ಮುಂದಿನ ದಿನಗಳಲ್ಲಿ ಅಮೃತ ಮಹೋತ್ಸವ ಹಾಗೂ ಶತಮಾನೋತ್ಸವವನ್ನು ಆಚರಿಸುವಂತಾಗಬೇಕು ಎಂದು ಆಶಿಸಿದರು.  

ಜ್ಞಾನಯೋಗಾಶ್ರಮದ ಅಧ್ಯಕ್ಷರಾದ  ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಘದ ಅಧ್ಯಕ್ಷ ವಿನಾಯಕ ಓದಿ ಅಧ್ಯಕ್ಷತೆ ವಹಿಸಿದ್ದರು. ಉತ್ತರ ಕರ್ನಾಟಕ ಆರೋಗ್ಯ ಇಲಾಖೆಯ ಉಪನಿರ್ದೇಶಕ ಡಾ. ಸಂಪತ್ಕುಮಾರ ಗುಣಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿ ಮಾತನಾಡಿದರು.  

ಸಂಘದ ಅಧ್ಯಕ್ಷ ವಿನಾಯಕ ಓದಿ ಮಾತನಾಡಿ, ಈವರೆಗೆ ಸದಸ್ಯರಿಗೆ 6 ಲಕ್ಷದವರೆಗೆ ಸಾಲ ನೀಡಲಾಗುತ್ತಿದ್ದು, ಇನ್ನು ಮುಂದೆ 10 ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುವುದು. ಸಂಘದ ಆಡಳಿತ ಮಂಡಳಿ, ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿಯ ಸಹಕಾರದಿಂದ ಸಂಘ ಪ್ರಗತಿಯತ್ತ ಸಾಗುತ್ತಿದೆ ಎಂದು ತಿಳಿಸಿದರು.  

ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ವೈದ್ಯರು, ಸಂಘದ ಪದಾಧಿಕಾರಿಗಳು, ನಿರ್ದೇಶಕರು, ರಕ್ತದಾನಿಗಳು ಹಾಗೂ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಬ್ಯಾಂಕ್ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.  

ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ವೈ.ಆರ್‌. ಅಣ್ಣಿಗೇರಿ, ಸುಪುತ್ರಿ ಲಕ್ಷ್ಮೀ ಕೆಂಗಾರ ಹಾಗೂ ಕುಟುಂಬ ಸದಸ್ಯರನ್ನು ಸನ್ಮಾನಿಸಲಾಯಿತು. ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ರವಿಕಿರಣ ತೂರಿ ಕಾರ್ಯಕ್ರಮ ನಿರೂಪಿಸಿದರು.